ದೇಶ

ವಿಜಯ್ ರೂಪಾನಿ ಗುಜರಾತ್ ನೂತನ ಸಿಎಂ, ನಿತಿನ್ ಪಟೇಲ್ ಡಿಸಿಎಂ

Lingaraj Badiger
ಅಹಮದಾಬಾದ್: ಗುಜರಾತ್ ಬಿಜೆಪಿ ರಾಜ್ಯಾಧ್ಯಕ್ಷ ವಿಜಯ್ ರೂಪಾನಿ ಅವರು ಗುಜರಾತ್ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದು, ನಿತಿನ್ ಪಟೇಲ್ ಅವರು ಉಪ ಮುಖ್ಯಮಂತ್ರಿಯಾಗುವ ಸಾಧ್ಯತೆ ಇದೆ.
ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹಾಗೂ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ನೇತೃತ್ವದಲ್ಲಿ ನಡೆದ ಗುಜರಾತ್ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ರೂಪಾನಿ ಅವರನ್ನು ರಾಜ್ಯದ ಅತ್ಯುನ್ನತ ಹುದ್ದೆಗೆ ಆಯ್ಕೆ ಮಾಡಲಾಗಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಆನಂದಿ ಬೇನ್ ಸಂಪುಟದಲ್ಲಿ ಸಾರಿಗೆ ಸಚಿವರಾಗಿದ್ದ ರೂಪಾನಿ ಅವರು 2014ರಲ್ಲಿ ಕರ್ನಾಟಕ ರಾಜ್ಯಪಾಲರಾಗಿ ನೇಮಕಗೊಂಡ ವಜುಭಾಯಿ ವಾಲಾ ಅವರಿಂದ ತೆರವಾದ ರಾಜಕೋಟ್ ಪಶ್ಚಿಮ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಮೊದಲ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು.
ವಿಜಯ್ ರೂಪಾನಿ ಅವರು ವಿವಾದೇತರ ವ್ಯಕ್ತಿಯಾಗಿರುವುದರಿಂದ ಗುಜರಾತ್ ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆಮಾಡಲಾಗಿದೆ. 
ಕಳೆದ ಬುಧವಾರ ಸಂಜೆ ಆನಂದಿಬೇನ್ ಪಟೇಲ್ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. ಅವರಿಂದ ತೆರವಾದ ಸ್ಥಾನಕ್ಕೆ ಆಮಿತ್ ಅವರನ್ನು ನೇಮಕ ಮಾಡಲಾಗುತ್ತಿದೆ ಎಂದು ಹೇಳಲಾಗಿತ್ತು. ಆದರೆ ಈ ಬಗ್ಗೆ ಸ್ಪಷ್ಟನೆ ನೀಡಿದ್ದ ಬಿಜೆಪಿ ಹಿರಿಯ ನಾಯಕ ವೆಂಕಯ್ಯ ನಾಯ್ಡು ಅವರು, ಶಾ ಅವರು ರಾಷ್ಟ್ರ ರಾಜಕಾರಣದಲ್ಲೇ ಮುಂದುವರೆಯಲಿದ್ದಾರೆ ಎಂದು ಹೇಳಿದ್ದರು.
SCROLL FOR NEXT