ಸ್ವಯಂ ಘೋಷಿತ ಗೋ ರಕ್ಷಕರ ಕುರಿತ ಹೇಳಿಕೆಯನ್ನು ಕಾರ್ಯಗತಗೊಳಿಸಿ: ಪ್ರಧಾನಿಗೆ ಅಸಾವುದ್ದೀನ್ ಓವೈಸಿ
ಸ್ವಯಂ ಘೋಷಿತ ಗೋ ರಕ್ಷಕರ ಬಗ್ಗೆ ನೀಡಿರುವ ಹೇಳಿಕೆಯನ್ನು ಕಾರ್ಯಗತಗೊಳಿಸಿ ಎಂದು ಪ್ರಧಾನಿ ನರೇಂದ್ರ ಮೋದಿಗೆ ಎಂಐಎಂ ಪಕ್ಷದ ಮುಖಂಡ ಅಸಾವುದ್ದೀನ್ ಓವೈಸಿ ಒತ್ತಾಯಿಸಿದ್ದಾರೆ.
ಹೈದರಾಬಾದ್: ಸ್ವಯಂ ಘೋಷಿತ ಗೋ ರಕ್ಷಕರ ಬಗ್ಗೆ ನೀಡಿರುವ ಹೇಳಿಕೆಯನ್ನು ಕಾರ್ಯಗತಗೊಳಿಸಿ ಎಂದು ಪ್ರಧಾನಿ ನರೇಂದ್ರ ಮೋದಿಗೆ ಎಂಐಎಂ ಪಕ್ಷದ ಮುಖಂಡ ಅಸಾವುದ್ದೀನ್ ಓವೈಸಿ ಒತ್ತಾಯಿಸಿದ್ದಾರೆ.
ಗೋರಕ್ಷಕರ ವಿಷಯದ ಬಗ್ಗೆ ಹೇಳಿಕೆ ನೀಡಲು ಪ್ರಧಾನಿ ನರೇಂದ್ರ ಮೋದಿ ಅವರು ವಿಳಂಬ ಮಾಡಿದ್ದನ್ನು ಪ್ರಶ್ನಿಸಿರುವ ಅಸಾವುದ್ದೀನ್ ಓವೈಸಿ, ಕೇವಲ ಹೇಳಿಕೆಗಳು ಮಾತ್ರ ಸಾಕಾಗುವುದಿಲ್ಲ, ಹೇಳಿಕೆಯನ್ನು ಕಾರ್ಯಗತಗೊಳಿಸಿ ಎಂದು ಆಗ್ರಹಿಸಿದ್ದಾರೆ. ಅಲ್ಪಸಂಖ್ಯಾತರು, ದಲಿತರಲ್ಲಿ ಅಭದ್ರತೆಯ ಭಾವನೆಯನ್ನು ತೆಗೆದುಹಾಕಲು ಪ್ರಧಾನಿ ಮೋದಿ ಹೇಳಿಕೆಯನ್ನು ಕಾರ್ಯಗತಗೊಳಿಸಬೇಕಾಗುತ್ತದೆ ಎಂದಿದ್ದಾರೆ.
ಗುಜರಾತ್ ನಲ್ಲಿ ದಲಿತರ ಮೇಲೆ ಗೋರಕ್ಷಕರು ಹಲ್ಲೆ ನಡೆಸಿದ ವಿಡಿಯೋ ದೇಶದ ಪ್ರತಿಯೊಂದು ಮನೆಗೂ ತಲುಪಿದೆ. ದಲಿತ ಸಮಾಜ ಹಾಗು ಜಾತ್ಯಾತೀತ ಜನರು ಇದನ್ನು ಪ್ರತಿಭಟಯಿಸಿದ್ದಾರೆ. ಪರಿಣಾಮ ಈ ಬಗ್ಗೆ ಪ್ರತಿಕ್ರಿಯೆ ನೀಡಲೇಬೇಕಾದ ಒತ್ತಡ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಉಂಟಾಗಿದೆ ಎಂದು ಅಸಾವುದ್ದೀನ್ ಓವೈಸಿ ಅಭಿಪ್ರಾಯಪಟ್ಟಿದ್ದಾರೆ. ಸ್ವಯಂ ಘೋಷಿತ ಗೋ ರಕ್ಷಕರ ವಿರುದ್ಧ ಎಲ್ಲಾ ರಾಜ್ಯ ಸರ್ಕಾರಗಳು ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಪ್ರಧಾನಿ ದೆಹಲಿಯ ಇಂದಿರಾ ಗಾಂಧಿ ಸ್ಟೇಡಿಯಂ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೇಳಿದ್ದಕ್ಕೆ ಈ ಮೂಲಕ ಅಸಾವುದ್ದೀನ್ ಓವೈಸಿ ಪ್ರತಿಕ್ರಿಯೆ ನೀಡಿದ್ದಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.