ಸಹರಾನ್ ಪುರ: ಸೋಮವಾರ ನಸುಕಿನ ಜಾವ ಸಂಭವಿಸಿದ ರಸ್ತೆ ಅಪಘಾತದಲ್ಲಿ ಟ್ರ್ಯಾಕ್ಟರ್ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಕನಿಷ್ಠ 10 ಮಂದಿ ಯಾತ್ರಿಕರು ಸಾವನ್ನಪ್ಪಿ, 30 ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಸಹರಾನ್ ಪುರದಲ್ಲಿ ನಡೆದಿದೆ.
ಮಹಿಳೆಯರು ಮಕ್ಕಳು ಸೇರಿದಂತೆ 40ಕ್ಕೂ ಹೆಚ್ಚು ಯಾತ್ರಿಕರು ಸಹರಾನ್ ಪುರದ ಸಹಜ್ವ ಪ್ರದೇಶದಿಂದ ಸುಲ್ತಾನ್ ಪುರಕ್ಕೆ ಗ್ರಾಮಕ್ಕೆ ಧಾರ್ಮಿಕ ಕಾರ್ಯದಲ್ಲಿ ಭಾಗವಹಿಸಲೆಂದು ಟ್ರ್ಯಾಕ್ಟರ್ ನಲ್ಲಿ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ. ಸ್ಥಳದಲ್ಲೇ 10 ಮಂದಿ ಸಾವನ್ನಪ್ಪಿದರೆ ಗಾಯಗೊಂಡ 30 ಮಂದಿಯನ್ನು ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.
ಜಿಲ್ಲಾಧಿಕಾರಿ ಪವನ್ ಕುಮಾರ್ ಮತ್ತು ಹಿರಿಯ ಪೊಲೀಸ್ ಅಧಿಕಾರಿ ಪ್ರದೀಪ್ ಕುಮಾರ್ ಯಾದವ್ ಆಸ್ಪತ್ರೆಗೆ ಭೇಟಿ ನೀಡಿ ಅಪಘಾತದಲ್ಲಿ ಮಡಿದವರ ಮತ್ತು ಗಾಯಗೊಂಡವರ ಕುಟುಂಬಗಳಿಗೆ ಎಲ್ಲಾ ರೀತಿಯ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ.