ದೇಶ

ಪ. ಬಂಗಾಳ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: 3 ಸಾವು, 50 ಮಕ್ಕಳಿಗೆ ಗಾಯ

Lingaraj Badiger
ಕೋಲ್ಕತಾ: ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿನ ಬೆಹ್ರಾಂಪುರ್ ಆಸ್ಪತ್ರೆಯೊಂದರಲ್ಲಿ ಶನಿವಾರ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಠ ಮೂವರು ಮೃತಪಟ್ಟಿದ್ದಾರೆ ಮತ್ತು 50ಕ್ಕೂ ಹೆಚ್ಚು ಮಕ್ಕಳು ಗಾಯಗೊಂಡಿದ್ದಾರೆ. 
ಬೆಹ್ರಾಂಪುರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಈ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಓರ್ವ ಮಹಿಳೆ ಸೇರಿದಂತೆ ಮೂವರು ಮೃತಪಟ್ಟಿದ್ದಾರೆ. ಅಲ್ಲದೆ ಆಸ್ಪತ್ರೆಯಲ್ಲಿದ್ದ ಹಲವರು ಅಪಾಯದಲ್ಲಿ ಸಿಲುಕಿದ್ದು, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಆಸ್ಪತ್ರೆಯ ಮೂರನೇ ಅಂತಸ್ತಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅದೇ ಅಂತಸ್ತಿನಲ್ಲೇ ಮಕ್ಕಳ ವಾರ್ಡ್ ಕೂಡ ಇದೆ ಎಂದು ಆಸ್ಪತ್ರೆ ಸಿಬ್ಬಂದಿ ತಿಳಿಸಿದ್ದಾರೆ.
ಮೃತ ಮಹಿಳೆಯನ್ನು ಆಸ್ಪತ್ರೆಯ ಮಕ್ಕಳ ವಿಭಾಗದ ಮೇಲ್ವಿಚಾರಕಿ ಎಂದು ಗುರುತಿಸಲಾಗಿದೆ. ವಿಚಾರ ತಿಳಿಯುತ್ತಿದ್ದಂತೆಯೇ ಘಟನಾ ಪ್ರದೇಶಕ್ಕೆ ಆಗಮಿಸಿರುವ ಅಗ್ನಿಶಾಮಕ ದಳದ  ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದು,
5ಕ್ಕೂ ಹೆಚ್ಚು ಅಗ್ನಿ ಶಾಮಕ ವಾಹನಗಳ ನೆರವಿನಿಂದ ಬೆಂಕಿ ನಂದಿಸುವ ಕಾರ್ಯ ಭರದಿಂದ ಸಾಗಿದೆ. ಆಗ್ನಿ ಅವಘಡಕ್ಕೆ  ಕಾರಣ ತಿಳಿದುಬಂದಿಲ್ಲವಾದರೂ, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಪಶ್ಚಿಮ ಬಂಗಾಳ ಸರ್ಕಾರ ದುರಂತದಲ್ಲಿ ಮೃತಪಟ್ಟಿವರ ಕುಟುಂಬಕ್ಕೆ ತಲಾ ಎರಡು ಲಕ್ಷ ರುಪಾಯಿ ಪರಿಹಾರ ಘೋಷಿಸಿದೆ.
SCROLL FOR NEXT