ನವದೆಹಲಿ: ಜಮ್ಮು-ಕಾಶ್ಮೀರದ ಪಿಡಿಪಿ-ಬಿಜೆಪಿ ಸಮ್ಮಿಶ್ರ ಸರ್ಕಾರದ ಕಾರ್ಯವೈಖರಿಯನ್ನು ಟೀಕಿಸಿರುವ ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ- ಜಮ್ಮು-ಕಾಶ್ಮೀರ ಸಿಎಂ ಮೆಹಬೂಬಾ ಮುಫ್ತಿ ಅವರ ಭೇಟಿ ಉತ್ತರ ನೀಡುವುದಕ್ಕಿಂತ ಮತ್ತಷ್ಟು ಪ್ರಶ್ನೆಗಳು ಉದ್ಭವಿಸುವಂತೆ ಮಾಡಿದೆ ಎಂದು ಆರೋಪಿಸಿದೆ.
ಮೋದಿ- ಮೆಹಬೂಬಾ ಮುಫ್ತಿ ಅವರ ಭೇಟಿ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ನ ವಕ್ತಾರ ರಣ್ದೀಪ್ ಸುರ್ಜೆವಾಲಾ, ಪ್ರಧಾನಿ ಹಾಗು ಜಮ್ಮುಕಾಶ್ಮೀರದ ಸಿಎಂ ಮೆಹಬೂಬಾ ಮುಫ್ತಿ ಭೇಟಿಯಿಂದ ಕಾಶ್ಮೀರ ಸಮಸ್ಯೆಗೆ ಪರಿಹಾರ ಸಿಗುತ್ತದೆ ಎಂಬ ನಿರೀಕ್ಷೆ ಇತ್ತು. ಆದರೆ ಈ ಭೇಟಿ ಫಲಪ್ರದವಾಗದೆ ಮತ್ತಷ್ಟು ಗೊಂದಲ ಮೂಡಿಸಿದೆ ಎಂದು ಹೇಳಿದ್ದಾರೆ.
ಕಾಶ್ಮೀರದಲ್ಲಿ ಸತತ 50 ನೇ ದಿನವೂ ಸಹ ಕರ್ಫ್ಯೂ ಮುಂದುವರೆದಿದೆ. ಓರ್ವ ಪೊಲೀಸ್ ಅಧಿಕಾರಿಯನ್ನು ಹತ್ಯೆ ಮಾಡಲಾಗಿದೆ. ಕಳೆದ ಎರಡು ತಿಂಗಳಲ್ಲಿ ಉಂಟಾದ ಗಲಭೆಯಿಂದ ಕಾಶ್ಮೀರದಲ್ಲಿ 70 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡು 6,000 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ರಣ್ದೀಪ್ ಸುರ್ಜೆವಾಲಾ ಹೇಳಿದ್ದಾರೆ.
ಕಾಶ್ಮೀರದಲ್ಲಿ ಶಾಂತಿ ನೆಲೆಸುವುದನ್ನು ದೇಶವೇ ಎದುರು ನೋಡುತ್ತಿದೆ. ಆದರೆ ಜಮ್ಮು-ಕಾಶ್ಮೀರದಲ್ಲಿ ಮೈತ್ರಿಯ ಕಾರ್ಯಸೂಚಿಯಂತೆ ಸಮ್ಮಿಶ್ರ ಸರ್ಕಾರ ಕಾರ್ಯನಿರ್ವಹಿಸಿಲ್ಲ ಎಂದು ಸ್ವತಃ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಒಪ್ಪಿಕೊಂಡಿದ್ದಾರೆ. ಒಂದು ವೇಳೆ ಪಿಡಿಪಿ- ಬಿಜೆಪಿ ಕಾರ್ಯಸೂಚಿಗೆ ತಕ್ಕಂತೆ ಕಾರ್ಯನಿರ್ವಹಿಸಿದ್ದಿದ್ದರೆ ಕಾಶ್ಮೀರದ ಪರಿಸ್ಥಿತಿ ಈ ರೀತಿ ಇರುತ್ತಿರಲಿಲ್ಲ ಎಂದು ಕಾಂಗ್ರೆಸ್ ವಕ್ತಾರ ರಣ್ದೀಪ್ ಸುರ್ಜೆವಾಲಾ ಹೇಳಿದ್ದಾರೆ.