ಉತ್ತರ ಪ್ರದೇಶ: ಹಳಿ ತಪ್ಪಿದ ಅಜ್ಮೆರ್-ಸೀಲ್ದಹ್ ಎಕ್ಸ್ ಪ್ರೆಸ್ ರೈಲು; ಇಬ್ಬರ ಸಾವು, ಹಲವರಿಗೆ ಗಾಯ
ಕಾನ್ಪುರ ಬಳಿ ಕಾನ್ಪುರ-ಸೀಲ್ದಹ್ ಎಕ್ಸ್ ಪ್ರೆಸ್ ಹಳಿ ತಪ್ಪಿದ ಪರಿಣಾಮ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿ, ಹಲವಾರು ಪ್ರಯಾಣಿಕರು ಗಾಯಗೊಂಡಿದ್ದಾರೆ.
ಕಾನ್ಪುರ: ಮತ್ತೊಂದು ರೈಲು ದುರಂತಕ್ಕೆ ಉತ್ತರ ಪ್ರದೇಶ ಸಾಕ್ಷಿಯಾಗಿದ್ದು, ಕಾನ್ಪುರ ಬಳಿ ಕಾನ್ಪುರ-ಸೀಲ್ದಹ್ ಎಕ್ಸ್ ಪ್ರೆಸ್ ಹಳಿ ತಪ್ಪಿದ ಪರಿಣಾಮ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿ, 43ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ.
ಕಾನ್ಪುರ-ಸೀಲ್ಡಹ್ ಎಕ್ಸ್ ಪ್ರೆಸ್ ನ ಒಟ್ಟು 15 ಬೋಗಿಗಳು ಹಳಿ ತಪ್ಪಿದ್ದು, ಕಾನ್ಪುರದಿಂದ ಸುಮಾರು 70 ಕಿ.ಮೀ ದೂರದಲ್ಲಿರುವ ಕಾಲುವೆ ಅಡ್ಡಲಾಗಿ ಕಟ್ಟಲಾಗಿದ್ದ ರೈಲ್ವೇ ಸೇತುವೆ ದಾಟುತ್ತಿದ್ದಂತೆಯೇ ರೈಲು ಹಳಿ ತಪ್ಪಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಘಟನೆಯಲ್ಲಿ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದು. 43ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಈ ಪೈಕಿ 5 ಮಂದಿಯ ಸ್ಥಿತಿ ಚಿಂತಾಜನಕವಾಗಿದ್ದು, ಸಮೀಪದ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಕಾನ್ಪುರಕ್ಕೆ ತೆರಳುತ್ತಿದ್ದ ರೈಲು ಇಂದು ಬೆಳಗ್ಗೆ ಸುಮಾರು 6 ಗಂಟೆ ಹೊತ್ತಿನಲ್ಲಿ ಕಾಲುವೆ ಸೇತುವೆಯನ್ನು ದಾಟುತ್ತಿತ್ತು. ದಟ್ಟ ಮಂಜು ಆವರಿಸಿದ್ದರಿಂದ ಮುಂದಿನ ಹಳಿಗಳು ಅಷ್ಟಾಗಿ ಗೋಚರಿಸುತ್ತಿರಲಿಲ್ಲ ಎಂದು ಪ್ರಯಾಣಿಕರೊಬ್ಬರು ಹೇಳಿದ್ದಾರೆ. ಘಟನಾ ಸ್ಥಳಕ್ಕೆ ರೈಲ್ವೇ ಪೊಲೀಸರು ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಸ್ಥಳೀಯ ಅಗ್ನಿ ಶಾಮಕ ದಳದ ಅಧಿಕಾರಿಗಳು ಕೂಡ ರೈಲ್ವೇ ಪೊಲೀಸರಿಗೆ ಸಾಥ್ ನೀಡುತ್ತಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.