ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಬಂದಿಪೋರದಲ್ಲಿ ಉಗ್ರರು ಅಡಗಿ ಕುಳಿತಿದ್ದು, ಕಾರ್ಯಾಚರಣೆ ವೇಳೆ ಯೋಧರು ಹಾಗೂ ಉಗ್ರರ ನಡುವೆ ಭಾರೀ ಗುಂಡಿನ ಚಕಮಕಿ ನಡೆಯುತ್ತಿರುವುದಾಗಿ ಗುರುವಾರ ತಿಳಿದುಬಂದಿದೆ.
ಬಂದಿಪೋರದ ಶೆಹ್ಗುಂಡ್ ಹಜಿನ್ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವುದಾಗಿ ಗುಪ್ತಚರ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿರುವ ಹಿನ್ನೆಲೆಯಲ್ಲಿ, ಇಂದು ಬೆಳಿಗ್ಗೆ ಯೋಧರು ಕಾರ್ಯಾಚರಣೆಗಿಳಿದಿದ್ದರು. ಈ ವೇಳೆ ಉಗ್ರರು ಭದ್ರತಾ ಸಿಬ್ಬಂದಿಗಳ ಮೇಲೆ ಗುಂಡಿನ ದಾಳಿ ನಡೆಸಿದ್ದು, ಇಬ್ಬರು ಯೋಧರು ಗಾಯಗೊಂಡಿದ್ದಾರೆಂದು ಮೂಲಗಳು ತಿಳಿಸಿವೆ.
ಇದೀಗ ಸ್ಥಳದ ಸುತ್ತಲೂ ಯೋಧರು ಸುತ್ತುವರೆದಿದ್ದು, ಕಾರ್ಯಾಚರಣೆ ಮುಂದುವರೆದಿದೆ. ಗಾಯಗೊಂಡ ಯೋಧರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಟ್ವಿಟರ್ ನಲ್ಲಿ ಹೇಳಿದ್ದಾರೆ.
ಕೆಲ ದಿನಗಳ ಹಿಂದಷ್ಟೇ ಕಾಶ್ಮೀರ ಮೂಲದ ಲಷ್ಕರ್-ಇ-ತೊಯ್ಬಾದ ಮುಖ್ಯ ಕಮಾಂಡರ್ ಹಾಗೂ ಇಂಜಿನಿಯರ್ ವಿದ್ಯಾರ್ಥಿಯೊಬ್ಬ ಉಗ್ರ ಸಂಘಟನೆಯೊಂದಕ್ಕೆ ಸೇರ್ಪಡೆಗೊಂಡಿದ್ದರು. ಜಮ್ಮು ಮತ್ತು ಕಾಶ್ಮೀರದ ಸೇನೆ ಹಾಗೂ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಈ ಇಬ್ಬರನ್ನು ಹತ್ಯೆ ಮಾಡಿದ್ದರು. ಇದರ ಬೆನ್ನಲ್ಲೇ ಇದೀಗ ಬಂದಿಪೋರದಲ್ಲಿ ಉಗ್ರರು ದಾಳಿ ನಡೆಸಲು ಯತ್ನ ನಡೆಸಿದ್ದಾರೆಂದು ತಿಳಿದುಬಂದಿದೆ.