ದೇಶ

ಸಮಾಜವಾದಿ ಪಕ್ಷದಿಂದ ಅಖಿಲೇಶ್ ಯಾದವ್, ರಾಮ್ ಗೋಪಾಲ್ ಯಾದವ್ ಉಚ್ಛಾಟನೆ

Lingaraj Badiger
ಲಖನೌ: ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿರುವಾಗ ಉತ್ತರ ಪ್ರದೇಶ ಆಡಳಿತರೂಢ ಸಮಾಜವಾದಿ ಪಕ್ಷದಲ್ಲಿ ಭಿನ್ನಮತ ತಾರಕಕ್ಕೇರಿದ್ದು, ತಮ್ಮ ತಂದೆಯ ವಿರುದ್ಧವೇ ಬಂಡಾಯವೆದ್ದಿದ್ದ ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಹಾಗೂ ಪಕ್ಷದ ಪ್ರಧಾನ ಕಾರ್ಯದರ್ಶಿ ರಾಮ್ ಗೋಪಾಲ್ ಯಾದವ್ ಅವರನ್ನು ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಅವರು ಶುಕ್ರವಾರ ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಛಾಟನೆ ಮಾಡಿದ್ದಾರೆ.
ಅಭ್ಯರ್ಥಿಗಳ ಪಟ್ಟಿಗೆ ಸಂಬಂಧಿಸಿದಂತೆ ತಂದೆಯ ವಿರುದ್ಧವೇ ತಿರುಗಿಬಿದ್ದ ಅಖಿಲೇಶ್ ಯಾದವ್ ಅವರು ನಿನ್ನೆ ತಮ್ಮ ಬೆಂಬಲಿಗರನ್ನೊಳಗೊಂಡ 167 ಅಭ್ಯರ್ಥಿಗಳ ಪ್ರತ್ಯೇಕ ಪಟ್ಟಿ ಬಿಡುಗಡೆ ಮಾಡಿದ್ದರು. ಈ ಸಂಬಂಧ ಅಖಿಲೇಶ್ ಯಾದವ್ ಹಾಗೂ ಅವರ ಸಹೋದರ ಸಂಬಂಧಿ ರಾಮ್ ಗೋಪಾಲ್ ಯಾದವ್ ಅವರಿಗೆ ಮುಲಾಯಂ ಸಿಂಗ್ ಯಾದವ್ ಅವರು ಇಂದು ಶೋಕಾಸ್ ನೋಟಿಸ್ ನೀಡಿದ್ದರು. 
ನೋಟಿಸ್ ಬೆನ್ನಲ್ಲೇ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮುಲಾಯಂ ಸಿಂಗ್ ಯಾದವ್ ಅವರು, ಪಕ್ಷದ ಶಿಸ್ತು ಉಲ್ಲಂಘಿಸಿದ್ದಕ್ಕಾಗಿ ಈ ಇಬ್ಬರು ನಾಯಕರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ನನಗೆ ಕುಟುಂಬಕ್ಕಿಂತ ಪಕ್ಷ ಮುಖ್ಯ. ಪಕ್ಷದ ಒಳಿತಿಗಾಗಿ ಅಖಿಲೇಶ್ ಯಾದವ್ ಹಾಗೂ ರಾಮ್ ಗೋಪಾಲ್ ಯಾದವ್ ಅವರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ ಎಂದು ತಿಳಿಸಿದರು. ಅಲ್ಲದೆ ನೂತನ ಮುಖ್ಯಮಂತ್ರಿಯನ್ನು ನಾವು ಆಯ್ಕೆ ಮಾಡುತ್ತೇವೆ ಎಂದಿದ್ದಾರೆ.
ಇದೇ ವೇಳೆ ರಾಮ್ ಗೋಪಾಲ್ ಯಾದವ್ ಅವರು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದು, ವಿಧಾನಸಭೆ ಚುನಾವಣೆಗೂ ಮುನ್ನವೇ ಪಕ್ಷವನ್ನು ದುರ್ಬಲಗೊಳಿಸುತ್ತಿದ್ದಾರೆ ಎಂದು ಮುಲಾಯಂ ಸಿಂಗ್ ಯಾದವ್ ಅವರು, ಆರೋಪಿಸಿದ್ದಾರೆ.
ಗೋಪಾಲ್ ಯಾದವ್ ಅವರು ನೇರವಾಗಿ ನನ್ನ ವಿರುದ್ಧವೇ ವಾಗ್ದಾಳಿ ನಡೆಸಿದ್ದಲ್ಲದೆ ಎಸ್ ಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆ ಕರೆದಿದ್ದರು. ರಾಷ್ಟ್ರೀಯ ಅಧ್ಯಕ್ಷರಿಗೆ ಮಾತ್ರ ಈ ಸಭೆ ಕರೆಯುವ ಅಧಿಕಾರಿ ಇದೆ ಎಂದರು.
ಪಕ್ಷದಿಂದ ಉಚ್ಛಾಟನೆಗೊಂಡಿರುವ ಅಖಿಲೇಶ್ ಯಾದವ್ ಅವರು ಶೀಘ್ರದಲ್ಲೇ ಮುಖ್ಯಮಂತ್ರಿ ಸ್ಥಾನಕ್ಕೂ ರಾಜಿನಾಮೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಪ್ರತ್ಯೇಕ ಪಟ್ಟಿ ಬಿಡುಗಡೆ ಮಾಡಿದ ಅಖಿಲೇಶ್ ಯಾದವ್ ಹಾಗೂ ಪಕ್ಷದ ವಿರುದ್ಧ ಹೇಳಿಕೆ ನೀಡಿದ ರಾಮ್ ಗೋಪಾಲ್ ಯಾದವ್ ಅವರಿಗೆ ಮುಲಾಯಂ ಸಿಂಗ್ ಯಾದವ್ ಅವರು ಕಾರಣ ಕೇಳಿ ನೋಟಿಸ್ ನೀಡಿದ್ದರು. ಅಲ್ಲದೆ ನಾಳೆ ತಾವು ಪ್ರಕಟಿಸಿದ ಅಭ್ಯರ್ಥಿಗಳ ಸಭೆ ಕರೆದಿದ್ದಾರೆ.
ಪಕ್ಷದ ಮುಖ್ಯಸ್ಥ ತಮ್ಮ ತಂದೆ ಮುಲಾಯಂ ಸಿಂಗ್ ಯಾದವ್ ಅವರು ತಮ್ಮೊಂದಿಗೆ ಚರ್ಚಿಸಿದೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದಾರೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದ ಅಖಿಲೇಶ್ ಯಾದವ್ ಅವರು ತಮ್ಮ ಬೆಂಬಲಿಗ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವ ಮೂಲಕ ತಂದೆಗೆ ತಿರುಗೇಟು ನೀಡಿದ್ದರು.
SCROLL FOR NEXT