ಮದುರೈ: ತಮಿಳುನಾಡು ಸಾರಿಗೆ ಸಂಸ್ಥೆಯ ಬಸ್ ಹಾಗೂ ಸಿಮೆಂಟ್ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಓರ್ವ ಮಗು ಹಾಗೂ ಐವರು ಮಹಿಳೆಯರು ಸೇರಿದಂತೆ 10 ಮಂದಿ ಮೃತಪಟ್ಟಿರುವ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ.
ಟಿ.ಕುಲ್ಲುಪಟ್ಟಿ ಬಳಿ ಈ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 23ಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಿರುಮಂಗಲಂ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪೊಲೀಸರ ಪ್ರಕಾರ, ತಿರುನೆಲ್ವೆಲ್ಲಿ ಜಿಲ್ಲೆಯಿಂದ ಕುಮಿಲಿಗೆ ತರಳುತ್ತಿದ್ದ ಬಸ್ ಹಾಗೂ ತೆಂಕಸಿಗೆ ತೆರಳುತ್ತಿದ್ದ ಸಿಮೆಂಟ್ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಬಸ್ಸಿನಲ್ಲಿ ಒಟ್ಟು 40 ಪ್ರಯಾಣಿಕರಿದ್ದರು ಎನ್ನಲಾಗಿದೆ. ಅಪಘಾತದಲ್ಲಿ ಬಸ್ ಚಾಲಕ ಸೇರಿದಂತೆ 8 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನಿಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ತಮಿಳುನಾಡು ಅಗ್ನಿ ಶಾಮಕ ದಳದ ಸಿಬ್ಬಂದಿ ಹಾಗೂ ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.