ನವದೆಹಲಿ: ಜವಾಹಾರ್ ಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ದೇಶ ವಿರೋಧಿ ಘೋಷಣೆಗಳನ್ನು ಕೂಗಿರುವ ವಿಡಿಯೋವನ್ನು ಫೋರೆನ್ಸಿಕ್ ಲ್ಯಾಬ್ ಗೆ ಕಳುಹಿಸಲಾಗಿದೆ ಎಂದು ಅರವಿಂದ್ ಕೇಜ್ರಿವಾಲ್ ಸರ್ಕಾರ ತಿಳಿಸಿದೆ.
ಜೆಎನ್ ಯು ಆವರಣದಲ್ಲಿ ದೇಶ ವಿರೋಧಿ ಘೋಷಣೆಗಳನ್ನು ಕೂಗುತ್ತಿರುವ ವೀಡಿಯೋ ಪ್ರಸಾರವಾಗಿತ್ತು. ಆದರೆ, ಈ ವಿಡಿಯೋ ನಕಲಿ ಎಂದು ಕೆಲ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಈ ಹಿನ್ನಲೆಯಲ್ಲಿ ಜವಾಹಾರ್ ಲಾಲ್ ನೆಹರೂ ವಿಶ್ವವಿದ್ಯಾಲಯ(ಜೆಎನ್‍ಯು)ದಲ್ಲಿ ನಡೆದಿದೆ ಎನ್ನಲಾಗುತ್ತಿರುವ ದೇಶ ವಿರೋಧಿ ಪ್ರತಿಭಟನೆಯ ಕುರಿತು ತನಿಖೆ ನಡೆಸುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಶನಿವಾರ ಜಿಲ್ಲಾ ಮ್ಯಾಜಿಸ್ಟ್ರೇಟ್ ಗೆ ಸೂಚಿಸಿದ್ದರು.
ಜೆಎನ್ ಯು ವಿದ್ಯಾರ್ಥಿ ಸಂಘದ ನಾಯಕರು ದೇಶ ವಿರೋಧಿ ಘೋಷಣೆಗಳನ್ನು ಕೂಗಿದ್ದಾರೆ ಎಂದು ಆರೋಪಿಸಲಾಗುತ್ತಿದೆ. ಆದರೆ ಇದಕ್ಕೆ ಪ್ರತಿಯಾಗಿ ಎಬಿವಿಪಿ ವಿದ್ಯಾರ್ಥಿಗಳು ಆ ಕೆಲಸ ಮಾಡಿದ್ದಾರೆ ಎಂದು ದೂರಲಾಗುತ್ತಿದೆ. ಹೀಗಾಗಿ ಘಟನೆಯ ಕುರಿತು ತನಿಖೆಗೆ ಆದೇಶಿಸಲಾಗಿದೆ ಎಂದು ದೆಹಲಿ ಸಿಎಂ ತಿಳಿಸಿದ್ದರು.
ಫೆಬ್ರವರಿ 9ರಂದು ವಿವಿಯಲ್ಲಿ ಕಾರ್ಯಕ್ರಮವೊಂದನ್ನು ಆಯೋಜಿಸಲಾಗಿತ್ತು. ಈ ವೇಳೆ ಕೆಲವು ವಿದ್ಯಾರ್ಥಿಗಳು ಅಫ್ಜಲ್ ಗುರು ಪರ ಘೋಷಣೆಗಳನ್ನು ಕೂಗಿದ ಘಟನೆ ನಡೆದಿತ್ತು. ಈ ಸಂಬಂಧ ಈಗಾಗಲೇ ಜೆಎನ್ ಯು ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯ ಕುಮಾರ್ ಸೇರಿಜದಂತೆ ಏಳು ವಿದ್ಯಾರ್ಥಿಗಳನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.