ನವದೆಹಲಿ: ಸರ್ಕಾರಿ ಅಧಿಕಾರಿಯೊಬ್ಬರ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಆಮ್ ಆದ್ಮಿ ಪಕ್ಷದ ಶಾಸಕ ಮಹೇಂದ್ರ ಯಾದವ್ ಅವರನ್ನು ಕೋರ್ಟ್ ಒಂದು ದಿನದ ಮಟ್ಟಿಗೆ ಪೊಲೀಸ್ ವಶಕ್ಕೆ ಒಪ್ಪಿಸಿದೆ.
ವಿಕಾಸ್ಪುರ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಮಹೇಂದ್ರ ಯಾದವ್ ಅವರನ್ನು ದೆಹಲಿ ಪೊಲೀಸರು ಇಂದು ಬೆಳಗ್ಗೆ ಬಂಧಿಸಿ, ಮೆಟ್ರೋಪೊಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್ ಮುಂದೆ ಹಾಜರು ಪಡಿಸಿದರು. ವಿಚಾರಣೆ ನಡೆಸಿದ ನ್ಯಾಯಾಧೀಶ ಹರ್ವಿಂದರ್ ಸಿಂಗ್ ಅವರು, ವಿಚಾರಣೆಗಾಗಿ ಒಂದು ದಿನದ ಮಟ್ಟಿಗೆ ಪೊಲೀಸ್ ವಶಕ್ಕೆ ನೀಡಿದ್ದಾರೆ.
3 ವರ್ಷದ ಬಾಲಕಿ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಎಫ್ ಐಆರ್ ದಾಖಲಿಸಿಕೊಂಡಿಲ್ಲ ಎಂದು ಆರೋಪಿ ಆಪ್ ಶಾಸಕ ಪ್ರತಿಭಟನೆ ನಡೆಸುತ್ತಿದ್ದರು. ಪ್ರತಿಭಟನೆ ವೇಳೆ ಸರ್ಕಾರಿ ಅಧಿಕಾರಿಯೊಬ್ಬರ ಮೇಲೆ ಮಹೇಂದ್ರ ಯಾದವ್ ಅವರು ಹಲ್ಲೆ ಮಾಡಿದ್ದರು ಎಂದು ಹೇಳಲಾಗಿದೆ.