ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದ ಅತ್ಯಾಚಾರ ಸಂತ್ರಸ್ತೆ ಮೇಲೆ ಸಿಬ್ಬಂದಿಯಿಂದ ಮತ್ತೆ ಅತ್ಯಾಚಾರ
ಅನಾರೋಗ್ಯಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿದ್ದ ಅತ್ಯಾಚಾರ ಸಂತ್ರಸ್ತೆಯೊಬ್ಬಳ ಮೇಲೆ ಆಸ್ಪತ್ರೆಯ ಭದ್ರತಾ ಸಿಬ್ಬಂದಿಗಳು ಮತ್ತೆ ಅತ್ಯಾಚಾರ ಮಾಡಿರುವ ಅಮಾನವೀಯ ಘಟನೆಯೊಂದು ಜಮ್ಶೆಡ್ಪುರದ ಎಂಜಿಎಂ ಆಸ್ಪತ್ರೆಯಲ್ಲಿ ಸೋಮವಾರ ನಡೆದಿದೆ...
ಜಮ್ಶೆಡ್ಪುರ: ಅನಾರೋಗ್ಯಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿದ್ದ ಅತ್ಯಾಚಾರ ಸಂತ್ರಸ್ತೆಯೊಬ್ಬಳ ಮೇಲೆ ಆಸ್ಪತ್ರೆಯ ಭದ್ರತಾ ಸಿಬ್ಬಂದಿಗಳು ಮತ್ತೆ ಅತ್ಯಾಚಾರ ಮಾಡಿರುವ ಅಮಾನವೀಯ ಘಟನೆಯೊಂದು ಜಮ್ಶೆಡ್ಪುರದ ಎಂಜಿಎಂ ಆಸ್ಪತ್ರೆಯಲ್ಲಿ ಸೋಮವಾರ ನಡೆದಿದೆ.
ಅತ್ಯಾಚಾರಕ್ಕೊಳಗಾದವಳು (15) ಅಪ್ರಾಪ್ತ ಬಾಲಕಿಯಾಗಿದ್ದು, ಈಕೆಯ ಮೇಲೆ ಈ ಹಿಂದೆ ಅತ್ಯಾಚಾರವಾಗಿದೆ. ಅನಾರೋಗ್ಯಕ್ಕೀಡಾದ ಕಾರಣ ಈಕೆಯನ್ನು ಕೆಲವು ದಿನಗಳ ಹಿಂದಷ್ಟೇ ಎಂಜಿಎಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಬಾಲಕಿಯನ್ನು ಕರೆದೊಯ್ದಿರುವ ಸಿಬ್ಬಂದಿಗಳು ಆಕೆಯನ್ನು ನಿರ್ಜನ ಪ್ರದೇಶಕ್ಕೆ ಹೊತ್ತೊಯ್ದು ಅತ್ಯಾಚಾರ ಮಾಡಿದ್ದಾರೆಂದು ಪೊಲೀಸ ಬಳಿ ಬಾಲಕಿ ಹೇಳಿಕೊಂಡಿದ್ದಾಳೆ.
ಬಾಲಕಿಯ ಹೇಳಿಕೆ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅತ್ಯಾಚಾರ ಮಾಡಿರುವವರು ಖಾಸಗಿ ಭದ್ರತಾ ಸಿಬ್ಬಂದಿಗಳಾಗಿದ್ದಾರೆಂದು ಹೇಳಿದ್ದಾರೆ.
ಘಟನೆ ಕುರಿತಂತೆ ಮಾಹಿತಿ ನೀಡಿರುವ ಹಿರಿಯ ಅಧಿಕಾರಿ ಅನೂಪ್ ಅವರು, ಪ್ರಕರಣ ಸಂಬಂಧ ಬಾಲಕಿ ನೀಡಿರುವ ಮಾಹಿತಿ ಆಧಾರದ ಮೇಲೆ ಈಗಾಗಲೇ ಎಫ್ಐಆರ್ ದಾಖಲಿಸಿಕೊಳ್ಳಲಾಗಿದ್ದು ಇಬ್ಬರು ವ್ಯಕ್ತಿಗಳನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಪ್ರಮುಖ ಆರೋಪಿಗಳು ತಲೆಮರೆಸಿಕೊಂಡಿದ್ದು, ಹುಡುಕಾಟ ಆರಂಭಿಸಲಾಗಿದೆ ಎಂದು ಹೇಳಿದ್ದಾರೆ.
ಘಟನೆ ನಡೆಯುವದಕ್ಕೂ ಕೆಲವು ಗಂಟೆಗಳ ಹಿಂದಷ್ಟೇ ಅಲ್ಲಿನ ಮುಖ್ಯಮಂತ್ರಿ ರಘುಬಾರ್ ದಾಸ್ ಅವರು ಆಸ್ಪತ್ರೆಯ ಕಾರ್ಯನಿರ್ವಹಣೆ ಕುರಿತಂತೆ ಮಾಹಿತಿ ತಿಳಿಯಲು ಆಸ್ಪತ್ರೆಗೆ ಆಗಮಿಸಿದ್ದರು. ಅಲ್ಲದೆ, ಅಧಿಕಾರಿಗಳೊಂದಿಗೆ ಸಭೆ ನಡೆಸಿ ಆಸ್ಪತ್ರೆಯ ಪರಿಸ್ಥಿತಿಯನ್ನು ಸುಧಾರಿಸಲು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.