ಕೋಲ್ಕತಾ: ಜುಲೈ.1 ರಂದು ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಉಗ್ರರ ದಾಳಿ ನಡೆದ ಹಿನ್ನೆಲೆಯಲ್ಲಿ ಭಾರತ- ಬಾಂಗ್ಲಾ ಗಡಿ ಪ್ರದೇಶಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
ಭಾರತದ ಗಡಿ ಪ್ರದೇಶಗಳಲ್ಲಿ ಗಡಿ ಭದ್ರತಾ ಪಡೆ ಹೆಚ್ಚಿನ ಭದ್ರತೆ ಕೈಗೊಂಡಿದ್ದು ಗಡಿ ಭಾಗದಿಂದ ಭಾರತಕ್ಕೆ ಯಾರೂ ನುಸುಳದಂತೆ ಎಚ್ಚರಿಕೆ ವಹಿಸಲಾಗಿದೆ. ಇನ್ನು ಗಡಿ ಪ್ರದೇಶದ ಜಿಲ್ಲೆಗಳಲ್ಲಿರುವ ಪೊಲೀಸ್ ಅಧಿಕಾರಿಗಳಿಗೂ ಸಹ ಜಿಲ್ಲಾಡಳಿತ ಶಂಕಿತ ಚಲನವಲನಗಳ ಬಗ್ಗೆ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ ಎಂದು ಪಶ್ಚಿಮ ಬಂಗಾಳ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬಾಂಗ್ಲಾದೊಂದಿಗೆ ಗಡಿ ಹಂಚಿಕೆ ಮಾಡಿಕೊಂಡಿರುವ ಜಿಲ್ಲೆಗಳ ಚೆಕ್ ಪೋಸ್ಟ್ ಗಳಲ್ಲಿ ವಾಹನಗಳನ್ನು ಕಟ್ಟುನಿಟ್ಟಿನ ತಪಾಸಣೆಗೆ ಒಳಪಡಿಸಲಾಗುತ್ತಿದೆ. ಪಶ್ಚಿಮ ಬಂಗಾಳದಲ್ಲಿ ಈದ್ ಹಾಗೂ ರಥ ಯಾತ್ರ ಆಚರಣೆ ನಡೆಯಲಿರುವ ಹಿನ್ನೆಲೆಯಲ್ಲಿ ಭದ್ರತೆಯನ್ನು ದುಪ್ಪಟ್ಟುಗೊಳಿಸಲಾಗಿದೆ.