ಮಧ್ಯ ಪ್ರದೇಶ ಪ್ರವಾಹ, ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್
ಭೋಪಾಲ್: ಮಧ್ಯಪ್ರದೇಶದಲ್ಲಿ ಭಾರೀ ಮಳೆಗೆ ಉಂಟಾದ ಪ್ರವಾಹಕ್ಕೆ ಕನಿಷ್ಠ 15 ಮಂದಿ ಸಾವನ್ನಪ್ಪಿದ್ದಾರೆ. ಪರಿಸ್ಥಿತಿಯನ್ನು ನಿಭಾಯಿಸಿ ಹತೋಟಿಗೆ ತರಲು ಅಧಿಕಾರಿಗಳು ಎಲ್ಲಾ ರೀತಿಯ ಕ್ರಮ ಕೈಗೊಳ್ಳುತ್ತಿದ್ದಾರೆ ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಪರಿಸ್ಥಿತಿ ಈಗ ಸುಧಾರಿಸಿದೆ. ಭೋಪಾಲ್, ಇಂದೋರ್ ಮತ್ತು ಉಜ್ಜೈನಿಯಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆಯಿದೆ ಎಂದು ಚೌಹಾಣ್ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
ನೆರೆ, ಪ್ರವಾಹದ ಕಾರಣದಿಂದಾಗಿ ಭೋಪಾಲ್-ಬರೇಲಿ ಮತ್ತು ರೈಸನ್-ವಿದಿಶಾ ರಸ್ತೆಗಳು ಮುಚ್ಚಿಹೋಗಿವೆ. ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ರಾಜ್ಯ ಬರಗಾಲ ಕ್ರಿಯಾ ತಂಡದ ಕಾರ್ಯವನ್ನು ಶ್ಲಾಘಿಸಿದ ಮುಖ್ಯಮಂತ್ರಿ, ಪ್ರವಾಹದಿಂದಾಗಿ ಎಲ್ಲಿ, ಎಷ್ಟು ಹಾನಿಯಾಗಿವೆ ಎಂದು ಸಮೀಕ್ಷೆ ನಡೆಸಲು ಆದೇಶ ನೀಡಿದ್ದು, ಬಡಜನರಿಗೆ ಪರಿಹಾರ ವಿತರಿಸಲಾಗುವುದು ಎಂದು ಹೇಳಿದರು.ನೀರಿನ ಮಟ್ಟ ಕಡಿಮೆಯಾದ ಮೇಲೆ ನೀರಿನಿಂದ ಹರಡುವ ರೋಗಗಳು ಬರುವ ಸಾಧ್ಯತೆಯಿರುವುದರಿಂದ ಶುದ್ಧ ಕುಡಿಯುವ ನೀರು ಜನರಿಗೆ ಸಿಗುವಂತೆ ಪಾಲಿಕೆ, ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ರಾಜ್ಯದ ಮಳೆ, ನೆರೆ ಪ್ರವಾಹದ ಕುರಿತು ಮುಖ್ಯಮಂತ್ರಿ ಕೇಂದ್ರ ಸರ್ಕಾರಕ್ಕೆ ವಿವರಿಸಿದ್ದಾರೆ. ಗೃಹ ಸಚಿವ ರಾಜನಾಥ್ ಸಿಂಗ್ ಅವರೊಂದಿಗೆ ದೂರವಾಣಿ ಮೂಲಕ ಸಂಭಾಷಣೆ ನಡೆಸಿ ಪರಿಸ್ಥಿತಿಯನ್ನು ವಿವರಿಸಿದ್ದಾರೆ.