ಲಖನೌ: ಉತ್ತರ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಬಾಲಿವುಡ್ ನಟ ಹಾಗೂ ರಾಜ್ಯಸಭಾ ಸದಸ್ಯ ರಾಜ್ ಬಬ್ಬರ್ ಅವರನ್ನು ನೇಮಕ ಮಾಡಲಾಗಿದೆ.
ಈ ಮೂಲಕ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಪುತ್ರಿ ಪ್ರಿಯಾಂಕಾ ಗಾಂಧಿ ಅವರನ್ನು ಅಖಾಡಕ್ಕೆ ಇಳಿಸಲಾಗುತ್ತಿದೆ ಎಂಬ ಊಹಾಪೋಹಕ್ಕೆ ತೆರೆ ಬಿದ್ದಂತಾಗಿದೆ.
ಇಂದು ದೆಹಲಿಯಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಉತ್ತರ ಪ್ರದೇಶ ಉಸ್ತುವಾರಿ ಗುಲಾಂ ನಬಿ ಆಜಾದ್ ಅವರು, ರಾಜ್ ಬಬ್ಬರ್ ಅವರನ್ನು ಉತ್ತರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದರು. ಆದರೆ ಮುಂಬರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಯಾರೆಂಬ ಬಗ್ಗೆ ತುಟಿ ಬಿಚ್ಚಿಲ್ಲ.
ಈ ವೇಳೆ ಪ್ರಿಯಾಂಕಾ ಗಾಂಧಿ ಅವರಿಗೆ ಉತ್ತರಪ್ರದೇಶದ ಹೊಣೆಗಾರಿಕೆ ವಹಿಸಲಾಗುತ್ತಿದೆಯೇ ಎಂಬ ವರದಿಗಾರರ ಪ್ರಶ್ನೆಗೂ ಆಜಾದ್ ಅವರು ಯಾವುದೇ ಉತ್ತರ ನೀಡಿಲ್ಲ.
ಉತ್ತರಪ್ರದೇಶ ಚುನಾವಣೆಯ ದಿನಾಂಕ ಘೋಷಣೆಯಾದ ಮೇಲೆ ಪ್ರಿಯಾಂಕಾ ಗಾಂಧಿ ಅವರು ರಾಯ್ ಬರೇಲಿ ಮತ್ತು ಅಮೇಠಿಯಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿಕೊಳ್ಳಲಿದ್ದಾರೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics