ನವದೆಹಲಿ: ಉಗ್ರ ಕಮಾಂಡರ್ ಬುರ್ಹಾನ್ ವಾನಿ ಹತ್ಯೆ ಖಂಡಿಸಿ ಕಾಶ್ಮೀರದಲ್ಲಿ ನಡೆಯುತ್ತಿರುವ ಪ್ರತಿಭಟನೆ ಸತತ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಸಾವಿನ ಸಂಖ್ಯೆ ಬರೊಬ್ಬರಿ 32ಕ್ಕೇರಿದೆ.
ಈ ನಡುವೆ ಕಾಶ್ಮೀರ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮತ್ತು ಪ್ರತಿಪಕ್ಷ ಕಾಂಗ್ರೆಸ್ ಅಪರೂಪ ಎಂಬಂತೆ ಐಕ್ಯತೆ ಪ್ರದರ್ಶನ ಮಾಡಿದ್ದು, ನಿನ್ನೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಕರೆದಿದ್ದ ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ ಹಾಗೂ ಕಾಶ್ಮೀರ ಮಾಜಿ ಸಿಎಂ ಒಮರ್ ಅಬ್ದುಲ್ಲಾ ಪಾಲ್ಗೊಂಡಿದ್ದರು. ಸಭೆ ಬಳಿಕ ಮಾತನಾಡಿದ ಸೋನಿಯಾಗಾಂಧಿ ಅವರು, ರಾಷ್ಟ್ರೀಯ ಭದ್ರತಾ ವಿಚಾರಕ್ಕೆ ಸಂಬಂಧಿಸಿದಂತೆ ಯಾವುದೇ ರೀತಿಯ ರಾಜಿ ಮಾಡಿಕೊಳ್ಳದೇ ಸೂಕ್ತ ಕ್ರಮಕೈಗೊಳ್ಳಿ ಎಂದು ಹೇಳಿದರೆ, ಇತ್ತ ಕಾಶ್ಮೀರ ಮಾಜಿ ಸಿಎಂ ಒಮರ್ ಆಬ್ದುಲ್ಲಾ ಅವರು ಮಾತನಾಡಿ, ಕಣಿವೆ ರಾಜ್ಯದಲ್ಲಿ ಶಾಂತಿ ಸ್ಥಾಪಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕೈಗೊಳ್ಳಬೇಕಾದ ಎಲ್ಲ ಕ್ರಮಗಳನ್ನು ಕೈಗೊಂಡಿದೆ. ಇನ್ನು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಅವರಿಗೆ ನಾವು ಎಲ್ಲ ರೀತಿಯ ನೆರವು ನೀಡುವುದಾಗಿ ಒಮರ್ ಅಬ್ದುಲ್ಲಾ ತಿಳಿಸಿದ್ದಾರೆ.
ಇನ್ನು ಕೀನ್ಯಾ ಪ್ರವಾಸದಲ್ಲಿದ್ದ ರಾಷ್ಟ್ರೀಯ ಭದ್ರತಾ ಸಲಹೆಗಾರರಾದ ಅಜಿತ್ ಧೋವಲ್ ಅವರು ಕಾಶ್ಮೀರ ಗಲಭೆ ವಿಚಾರ ತಿಳಿಯುತ್ತಿದ್ದಂತೆಯೇ ಭಾರತಕ್ಕೆ ವಾಪಸಾಗಿದ್ದು, ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ.
32ಕ್ಕೇರಿದ ಸಾವಿನ ಸಂಖ್ಯೆ
ಈ ನಡುವೆ ಹಿಂಸಾಚಾರ ಪೀಡಿತ ಕಾಶ್ಮೀರದಲ್ಲಿ ಸಾವನ್ನಪ್ಪಿದವರ ಸಂಖ್ಯೆ 32ಕ್ಕೇರಿದ್ದು, ನಿನ್ನೆ ಒಂದೇ ದಿನ ಓರ್ವ ಬಾಲಕಿ ಸೇರಿದಂತೆ ಒಟ್ಟು 9 ಮಂದಿ ಸಾವನ್ನಪ್ಪಿದ್ದಾರೆ. ಇನ್ನು ಘಟನೆಯಲ್ಲಿ 100ಕ್ಕೂ ಹೆಚ್ಚು ಪೊಲೀಸರು ಸೇರಿದಂತೆ 400ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಅನಂತ್ ನಾಗ್ ಜಿಲ್ಲೆಯಲ್ಲಿ ಓರ್ವ ಪೊಲೀಸ್ ಅಧಿಕಾರಿ ಸಾವನ್ನಪ್ಪಿದ್ದು, ಪ್ರತಿಭಟನೆ ಇಂದೂ ಮುಂದುವರೆಯುವ ಲಕ್ಷಣಗಳು ಗೋಚರಿಸುತ್ತಿವೆ. ಈ ಹಿನ್ನಲೆಯಲ್ಲಿ ಕಾಶ್ಮೀರದಲ್ಲಿ ಭದ್ರತಾ ಪಡೆಗಳು ನಿಯೋಜನೆ ಮುಂದುವರೆದಿದ್ದು, ಈ ವರೆಗೂ 800ಕ್ಕೂ ಹೆಚ್ಚು ಅರೆಸೇನಾ ತುಕಡಿಗಳು, ಅಶ್ರುವಾಯುದಳ, ತುರ್ತು ಪ್ರಹಾರದಳಗಳು ಕಾರ್ಯನಿರ್ವಹಿಸುತ್ತಿವೆ.