ಉತ್ತರ ಪ್ರದೇಶದ ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿ ಶೀಲಾ ದೀಕ್ಷಿತ್
ನವದೆಹಲಿ: ಎರಡೂವರೆ ವರ್ಷಗಳ ನಂತರ ಸಕ್ರಿಯ ರಾಜಕಾರಣಕ್ಕೆ ಮರಳುತ್ತಿರುವ ದೆಹಲಿಯ ಮಾಜಿ ಮುಖ್ಯಮಂತ್ರಿ ಕಾಂಗ್ರೆಸ್ ನ ಹಿರಿಯ ನಾಯಕಿ ಶೀಲಾ ದೀಕ್ಷಿತ್, ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಉತ್ತರ ಪ್ರದೇಶ ಚುನಾವಣೆಯನ್ನು ನಿರ್ಣಯ ಮತ್ತು ವಿಶ್ವಾಸದೊಂದಿಗೆ ಎದುರಿಸಲಿದ್ದು, ರಾಜ್ಯದಲ್ಲಿ ಪಕ್ಷವನ್ನು ಜೀವಂತವಾಗಿರಿಸಲು ಪ್ರಯತ್ನಿಸುವುದಾಗಿ ಹೇಳಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರು ತಮಗೆ ನೀಡಿರುವ ಬಹು ದೊಡ್ಡ ಜವಾಬ್ದಾರಿಗೆ ಧನ್ಯವಾದ ಹೇಳಿದ 78 ವರ್ಷದ ಕಾಂಗ್ರೆಸ್ ಹಿರಿಯ ನಾಯಕಿ ಶೀಲಾ ದೀಕ್ಷಿತ್, ಪ್ರಿಯಾಂಕಾ ಗಾಂಧಿಯವರು ಕಾಂಗ್ರೆಸ್ ಪಕ್ಷಕ್ಕೆ ಬಹಳ ದೊಡ್ಡ ಸಂಪತ್ತಾಗಿದ್ದು, ಪಕ್ಷದ ಕಾರ್ಯಕರ್ತರು ಅವರು ಉತ್ತರ ಪ್ರದೇಶದಲ್ಲಿ ಸಕ್ರಿಯವಾಗಿ ಪ್ರಚಾರ ಮಾಡುವುದನ್ನು ಬಯಸುತ್ತಿದ್ದಾರೆ ಎಂದು ಹೇಳಿದರು.
1998, 2003 ಮತ್ತು 2008ರ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಮೂರು ಬಾರಿ ದೆಹಲಿ ಮುಖ್ಯಮಂತ್ರಿಯಾಗಿದ್ದ ಶೀಲಾ ದೀಕ್ಷಿತ್ 2013ರಲ್ಲಿ ಹೀನಾಯ ಸೋಲು ಕಂಡಿದ್ದರು. ತಮ್ಮ ಕ್ಷೇತ್ರದಲ್ಲೇ ಸೋತಿದ್ದರು. ಇದೀಗ ಅವರು ದೇಶದಲ್ಲಿಯೇ ಬಹುದೊಡ್ಡ ರಾಜ್ಯವಾದ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಸಜ್ಜಾಗಿದ್ದು, ಅಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಮರಳಬೇಕೆಂಬ ಜನರ ಒತ್ತಾಯ ಹೆಚ್ಚಾಗುತ್ತಿದೆ ಎಂದರು.
ಉತ್ತರ ಪ್ರದೇಶ ಚುನಾವಣೆಯಲ್ಲಿ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಇಬ್ಬರೂ ಪ್ರಮುಖ ಪಾತ್ರ ವಹಿಸಲಿದ್ದಾರೆ ಎಂದು ಹೇಳಿದರು.
ಶೀಲಾ ದೀಕ್ಷಿತ್ ಅವರು ಉತ್ತರ ಪ್ರದೇಶ ಕಾಂಗ್ರೆಸ್ ನ ಹಿರಿಯ ನಾಯಕ ದಿವಂಗತ ಉಮಾ ಶಂಕರ್ ದೀಕ್ಷಿತ್ ಅವರ ಸೊಸೆಯಾಗಿದ್ದಾರೆ.