ದೇಶ

ಖಾಡ್ಸೆ ವಿರುದ್ಧ ಸೂಕ್ತ ಕ್ರಮದ ಬಗ್ಗೆ ಬಿಜೆಪಿ ನಿರ್ಧರಿಸಲಿದೆ: ಫಡ್ನವಿಸ್

Lingaraj Badiger
ನವದೆಹಲಿ: ಭ್ರಷ್ಟಾಚಾರ ಹಾಗೂ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಜೊತೆ ಸಂಪರ್ಕ ಹೊಂದಿದ ಆರೋಪ ಎದುರಿಸುತ್ತಿರುವ ಮಹಾರಾಷ್ಟ್ರ ಕಂದಾಯ ಸಚಿವ ಏಕನಾಥ್ ಖಾಡ್ಸೆ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳುವ ಬಗ್ಗೆ ಬಿಜೆಪಿ ನಿರ್ಧರಿಸಲಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಹೇಳಿದ್ದಾರೆ. 
ಖಾಡ್ಸೆ ವಿರುದ್ಧ ಆರೋಪಗಳಿಗಳಿಗೆ ಸಂಬಂಧಿಸಿದಂತೆ ಇಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿ ಮಾಡಿ ಚರ್ಚಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಹಾ ಸಿಎಂ, ಖಾಡ್ಸೆ ವಿರುದ್ಧದ ಅಕ್ರಮ ಭೂ ವ್ಯವಹಾರ ಹಾಗೂ ಭೂಗತ ಪಾತಕಿ ದಾವೂದ್ ಇಬ್ರಾಹಿಂಗೆ ಕರೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಪಕ್ಷದ ಅಧ್ಯಕ್ಷರಿಗೆ ವರದಿ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.
ಖಾಡ್ಸೆ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದಂತೆ ನಾನು ವಸ್ತು ಸ್ಥಿತಿ ವರದಿ ಸಲ್ಲಿಸಿದ್ದೇನೆ. ಪಕ್ಷದ ನಿರ್ದೇಶನದಂತೆ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಫಡ್ನವಿಸ್ ವರದಿಗಾರರಿಗೆ ತಿಳಿಸಿದ್ದಾರೆ.
ಖಾಡ್ಸೆ ಅವರ ಈ ಅವಳಿ ಹಗರಣಗಳನ್ನು ಗಂಭೀರವಾಗಿ ಪರಿಗಣಿಸಿದ್ದ ಅಮಿತ್ ಶಾ, ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಚರ್ಚಿಸಿದ ಬಳಿಕ, ಖಾಡ್ಸೆ ವಿವಾದವನ್ನು ಆದಷ್ಟು ಬೇಗ ಇತ್ಯರ್ಥಪಡಿಸುವಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರಿಗೆ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
SCROLL FOR NEXT