ಪಾಟ್ನಾ: ಬಿಹಾರದಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುತ್ತಿದ್ದು, ಮಂಗಳವಾರ ಸಂಜೆಯಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ 57 ಮಂದಿ ಮೃತಪಟ್ಟಿದ್ದಾರೆ ಮತ್ತು 24 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ 24 ಗಂಟೆಗಳಲ್ಲಿ ಸಿಡಿಲು ಬಡಿದು ಒಟ್ಟು 48 ಮಂದಿ ಮೃತಪಟ್ಟಿದ್ದು, ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆಯಾಗುತ್ತಿದೆ. ಇದರಿಂದಾಗಿ ರಾಜ್ಯದ ಜನತೆ ಅಕ್ಷರಶಃ ತತ್ತರಿಸಿ ಹೋಗಿದ್ದು, ಅಪಾರ ನಷ್ಟ ಅನುಭವಿಸಿದ್ದಾರೆ.
ಪಾಟ್ನಾ ಜಿಲ್ಲೆಯ ವಿವಿಧ ಭಾಗಗಳಲ್ಲಿ ಆರು ಜನ, ಬಕ್ಸಾರ್ ಜಿಲ್ಲೆಯಲ್ಲಿ ಐವರು ಹಾಗೂ ರೊಹ್ತಾಸ್ ಜಿಲ್ಲೆಯಲ್ಲಿ ಏಳು ಜನ ಸೇರಿದಂತೆ ಭಾರೀ ಮಳೆಯಿಂದ ಒಟ್ಟು 57 ಮಂದಿ ಮೃತಪಟ್ಟಿದ್ದಾರೆ ಮತ್ತು 24 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ವಿಪತ್ತು ನಿರ್ವಹಣಾ ಪ್ರಧಾನ ಕಾರ್ಯದರ್ಶಿ ವ್ಯಾಸ್ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.
ರಕ್ಷಣಾ ತಂಡಗಳು ಕಾರ್ಯಾಚರಣೆಯನ್ನು ಮುಂದುವರೆಸಿವೆ. ಆದರೆ ರಾಜಧಾನಿಯಿಂದ ದೂರದಲ್ಲಿರುವ ಹಲವು ಪ್ರದೇಶಗಳಿಗೆ ರಕ್ಷಣಾ ಸಿಬ್ಬಂದಿ ಇನ್ನೂ ತಲುಪಿಲ್ಲವಾದ್ದರಿಂದ ಸಾವು ನೋವಿನ ಸ್ಪಷ್ಟ ಅಂದಾಜು ಸಿಗುತ್ತಿಲ್ಲ ಎಂದು ಹೇಳಿದ್ದಾರೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ ಜನತೆ ಆದಷ್ಟು ಬಹಿರಂಗ ಸ್ಥಳಗಳಿಗೆ ತೆರಳುವುದನ್ನು ಕಡಿಮೆ ಮಾಡಬೇಕು ಎಂದು ವ್ಯಾಸ್ ಅವರು ಮನವಿ ಮಾಡಿದ್ದಾರೆ. ಅಲ್ಲದೆ ಮಳೆ ಪರಿಸ್ಥಿತಿ ಬಗ್ಗೆ ಜಿಲ್ಲಾ ಮ್ಯಾಜಿಸ್ಟ್ರೇಟರಿಂದ ವರದಿ ಕೇಳಲಾಗಿದೆ ಎಂದು ತಿಳಿಸಿದ್ದಾರೆ.
ಈಗಾಗಲೇ ಸಾವನಪ್ಪಿದ ಕುಟುಂಬದ ಸದಸ್ಯರಿಗೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ತಲಾ ನಾಲ್ಕು ಲಕ್ಷ ರುಪಾಯಿ ಪರಿಹಾರ ಘೋಷಿಸಿದ್ದಾರೆ.