ಶ್ರೀನಗರ: ಸುಮಾರು ಎರಡು ತಿಂಗಳ ರಾಜ್ಯಪಾಲರ ಆಡಳಿತದ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಪಿಡಿಪಿ-ಬಿಜೆಪಿ ಮೈತ್ರಿಕೂಟ ಸರ್ಕಾರ ರಚನೆಯಾಗುವುದು ಖಚಿತವಾಗಿದ್ದು, ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರು ಮುಖ್ಯಮಂತ್ರಿಯಾಗಿ ಹಾಗೂ ಬಿಜೆಪಿಯ ನಿರ್ಮಲ್ ಸಿಂಗ್ ಅವರು ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಪ್ರತಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ನಾಯಕ ಸಾತ್ ಶರ್ಮಾ ಅವರು, ಪಿಡಿಪಿ ಮತ್ತು ಬಿಜೆಪಿ ಉಬಯ ಪಕ್ಷಗಳ ನಾಯಕರು ಸದ್ಯದಲ್ಲೇ ರಾಜ್ಯಪಾಲ ಎನ್.ಎನ್.ವೋಹ್ರಾ ಅವರನ್ನು ಭೇಟಿ ಮಾಡಿ ಸರ್ಕಾರ ರಚನೆಯ ಹಕ್ಕು ಮಂಡಿಸಲಿದ್ದಾರೆ ಎಂದು ತಿಳಿಸಿದರು.
ಇದೆ ವೇಳೆ ಬಿಜೆಪಿ ಶಾಸಕ ನಿರ್ಮಲ್ ಸಿಂಗ್ ಅವರು ಕಣಿವೆ ರಾಜ್ಯದ ಉಪ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ ಎಂದು ಶರ್ಮಾ ಸ್ಪಷ್ಟಪಡಿಸಿದರು.
ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಅವರ ಭೇಟಿ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.
ಪಿಡಿಪಿ-ಬಿಜೆಪಿ ಮೈತ್ರಿಕೂಟ ಸರ್ಕಾರದ ಮುಖ್ಯಮಂತ್ರಿಯಾಗಿದ್ದ ಮುಫ್ತಿ ಮೊಹಮ್ಮದ್ ಸಯೀದ್ ಅವರು ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಕಳೆದ ಜನವರಿಯಲ್ಲಿ ನಿಧನರಾದರು. ಬಳಿಕ ಬಿಜೆಪಿ ಮೈತ್ರಿಕೂಟದ ಒಪ್ಪಂದಗಳನ್ನು ಉಲ್ಲಂಘಿಸಿದೆ ಎಂದು ಆರೋಪಿಸಿ ಪಿಡಿಪಿ-ಬಿಜೆಪಿ ಮೈತ್ರಿ ಸರ್ಕಾರದ ನೇತೃತ್ವ ವಹಿಸಿಕೊಳ್ಳಲು ಮೆಹಬೂಬಾ ಮುಫ್ತಿ ನಿರಾಕರಿಸಿದ್ದರು.