ನವದೆಹಲಿ: ಅಗಸ್ಟಾ ವೆಸ್ಟ್‌ಲ್ಯಾಂಡ್ ವಿವಿಐಪಿ ಹೆಲಿಕಾಪ್ಟರ್ ಖರೀದಿ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ವಾಕ್ಸಮರ ಮುಂದುವರೆದಿದ್ದು, ಹಗರಣದಲ್ಲಿ ಅತ್ಯಂತ ಪ್ರಭಾವಿಯೊಬ್ಬರು ಭಾಗಿಯಾಗಿದ್ದಾರೆ ಎಂದು ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರು ಶನಿವಾರ ಹೇಳಿದ್ದಾರೆ.
ಎಎನ್ ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಪರಿಕ್ಕರ್, ಸಂಸತ್ತಿನಲ್ಲಿ ಮಾತನಾಡುವಾಗ ನಾನು ನೇರವಾಗಿ ಯಾರ ಹೆಸರೂ ಪ್ರಸ್ತಾಪಿಸಲಿಲ್ಲ. ಆದರೆ ಭ್ರಷ್ಟಾಚಾರದಲ್ಲಿ ಅತ್ಯಂತ ಪ್ರಭಾವಿಯೊಬ್ಬರು ಭಾಗಿಯಾಗಿರುವುದು ಸ್ಪಷ್ಟವಾಗಿದೆ ಎಂದರು.
3600 ಕೋಟಿ ರುಪಾಯಿಯ 12 ವಿವಿಐಪಿ ಹೆಲಿಕಾಪ್ಟರ್ ಖರೀದಿ ಹಗರಣದ ಕುರಿತು ಎಲ್ಲಾ ಕೊನಗಳಿಂದಲೂ ತನಿಖೆ ಮಾಡುವ ಅಗತ್ಯ ಇದೆ ಎಂದಿರುವ ರಕ್ಷಣಾ ಸಚಿವರು, ಖರೀದಿ ಒಪ್ಪಂದಕ್ಕೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ಪರಿಶೀಲಿಸಲಾಗುವುದು ಎಂದರು.
ಇದೇ ವೇಳೆ ಹಗರಣದಲ್ಲಿ ಭಾಗಿಯಾಗಿರುವ ಆರೋಪಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಸರ್ಕಾರ ಹಿಂದೇಟು ಹಾಕುವುದಿಲ್ಲ. ಅದು ಯಾರೇ ಆಗಿರಲಿ. 'ಮೊದಲ ಕುಟುಂಬ ಅಥವಾ ಕೊನೆಯ ಕುಟುಂಬವಾಗಿರಲಿ'. ಕಾನೂನಿನ ಮುಂದೆ ಎಲ್ಲರೂ ಒಂದೇ ಎಂದು ಪರಿಕ್ಕರ್ ಪಿಟಿಐಗೆ ಪ್ರತ್ಯೇಕವಾಗಿ ಹೇಳಿದ್ದಾರೆ.
ಕಳೆದ ಏಪ್ರಿಲ್ 7ರಂದು ಇಟಲಿ ಕೋರ್ಟ್ ನೀಡಿದ್ದ ತೀರ್ಪಿನಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಸೋನಿಯಾ ಗಾಂಧಿ ಅವರ ರಾಜಕೀಯ ಕಾರ್ಯದರ್ಶಿ ಅಹ್ಮದ್ ಪಟೇಲ್ ಹಾಗೂ ಭಾರತೀಯ ವಾಯುಪಡೆಯ ಮಾಜಿ ಮುಖ್ಯಸ್ಥ ಎಸ್ ಪಿ ತ್ಯಾಗಿ ಅವರ ಹೆಸರನ್ನು ಉಲ್ಲೇಖಿಸಲಾಗಿದೆ. ಈ ಸಂಬಂಧ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಕಾಂಗ್ರೆಸ್, ಬಿಜೆಪಿ ಮಧ್ಯ ತೀವ್ರ ವಾಗ್ಯುದ್ಧ, ಗಲಭೆ, ಗದ್ದಲ ನಡೆಯುತ್ತಿದೆ.