ವಾರಣಾಸಿ: ಸಿಲಿಂಡರ್ ಸ್ಫೋಟಗೊಂಡ ಪರಿಣಾಮ 12ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ವಾರಣಾಸಿಯ ಬನಾರಸ್ ಹಿಂದೂ ವಿಶ್ವ ವಿದ್ಯಾಲಯದಲ್ಲಿ ನಡೆದಿದೆ.
ಭಾನುವಾರ ಮುಂಜಾನೆ ಸುಮಾರು 1.30ರ ಹೊತ್ತಿನಲ್ಲಿ ಈ ಘಟನೆ ನಡೆದಿದ್ದು, ವಿವಿಯಲ್ಲಿದ್ದ ಆಮ್ಲಜನಕ ಸಿಲಿಂಡರ್ ಸ್ಫೋಟಗೊಂಡಿದೆ. ಸ್ಫೋಟದ ರಭಸಕ್ಕೆ ವಿವಿಯ ಕೊಠಡಿಗೆ ಅಳವಡಿಸಲಾಗಿದ್ದ ಎಸಿ ಕಂಪ್ರೆಸರ್ ಪೈಪ್ ಕೂಡ ಸ್ಫೋಟಗೊಂಡ ಪರಿಣಾಮ ಗಾಯಾಳುಗಳ ಸಂಖ್ಯೆ ಏರಿಕೆಯಾಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಸ್ಫೋಟದಿಂದಾಗಿ ಹೊತ್ತಿಕೊಂಡಿದ್ದ ಬೆಂಕಿಯನ್ನು ನಂದಿಸಿದ್ದಾರೆ.
ಘಟನೆಯಲ್ಲಿ ವಿದ್ಯಾರ್ಥಿಗಳು ವಿವಿಯ ಸಿಬ್ಬಂದಿಗಳು ಸೇರಿದಂತೆ ಸುಮಾರು 12 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಬನಾರಸ್ ನ ಸರ್ ಸುಂದರ್ ಲಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ತುರ್ತು ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಬಗ್ಗೆ ವಾರಣಾಸಿ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕಾರಿಗಳಿಂದ ವಿವರ ಪಡೆದಿದ್ದಾರೆ. ಇನ್ನು ಘಟನಾ ಸ್ಥಳಕ್ಕೆ ಕೇಂದ್ರ ಸಚಿವ ಮಹೇಶ್ ಶರ್ಮಾ ಅವರು ಭೇಟಿ ನೀಡಿ, ಬಳಿಕ ಆಸ್ಪತ್ರೆಯಲ್ಲಿದ್ದ ಗಾಯಾಳುಗಳನ್ನು ವಿಚಾರಿಸಿದ್ದಾರೆ.