ನವದೆಹಲಿ: ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ ಕಳೆದ ಫೆಬ್ರವರಿ 9ರಂದು ಸಂಸತ್ ದಾಳಿಯ ರೂವಾರಿ ಅಫ್ಜಲ್ ಗುರು ಪರ ನಡೆದ ಕಾರ್ಯಕ್ರಮಕ್ಕೆ ಸಂಬಂಧಿಸಿದ ನಾಲ್ಕು ವಿಡಿಯೋಗಳನ್ನು ಕೇಂದ್ರೀಯ ವಿಧಿ ವಿಜ್ಞಾನ ಪ್ರಯೋಗಾಲಯ(ಸಿಎಫ್ಎಸ್ಎಲ್) ಪ್ರಮಾಣಿಕರಿಸಿದ್ದು, ಕಾರ್ಯಕ್ರಮದಲ್ಲಿ ದೇಶ ವಿರೋಧಿ ಘೋಷಣೆ ಕೂಗಿದ್ದು ನಿಜ ಎಂದು ಹೇಳಿದೆ.
ಗುಜರಾತ್ ನ ಗಾಂಧಿನಗರದಲ್ಲಿರುವ ಸಿಎಫ್ಎಸ್ಎಲ್, ಪ್ರತಿಷ್ಠಿತ ಜೆಎನ್ ಯುನಲ್ಲಿ ನಡೆದ ಕಾರ್ಯಕ್ರಮದಲ್ಲಿ ದೇಶ ವಿರೋಧಿ ಘೋಷಣೆ ಕೂಗಿದ್ದನ್ನು ಖಚಿತಪಡಿಸಿದೆ.
ಫೆಬ್ರವರಿ 9ರಂದು ವಿವಿಯಲ್ಲಿ ಕಾರ್ಯಕ್ರಮವೊಂದನ್ನು ಆಯೋಜಿಸಲಾಗಿತ್ತು. ಈ ವೇಳೆ ಕೆಲವು ವಿದ್ಯಾರ್ಥಿಗಳು ಅಫ್ಜಲ್ ಗುರು ಪರ ಹಾಗೂ ದೇಶ ವಿರೋಧಿ ಘೋಷಣೆಗಳನ್ನು ಕೂಗಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಸಂಬಂಧ ಜೆಎನ್ ಯು ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯ ಕುಮಾರ್ ಸೇರಿಜದಂತೆ ಮೂವರು ವಿದ್ಯಾರ್ಥಿಗಳ ವಿರುದ್ಧ ದೇಶದ್ರೋಹದ ಕೇಸ್ ದಾಖಲಿಸಲಾಗಿದೆ.