ಅತ್ಯಾಚಾರ ಸಂತ್ರಸ್ತರಿಗೆ ಏಕರೀತಿಯ ಪರಿಹಾರ ನೀತಿ ರೂಪಿಸಲು ಸುಪ್ರೀಂ ಸೂಚನೆ
ಅತ್ಯಾಚಾರ ಸಂತ್ರಸ್ತೆಯರಿಗೆ ಸಾಕಷ್ಟು ಪರಿಹಾರ ಒದಗಿಸಲು ರಾಷ್ಟ್ರೀಯ ನೀತಿ ರೂಪಿಸ ಬೇಕು ಎಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿದೆ...
ನವದೆಹಲಿ: ಅತ್ಯಾಚಾರ ಸಂತ್ರಸ್ತೆಯರಿಗೆ ಸಾಕಷ್ಟು ಪರಿಹಾರ ಒದಗಿಸಲು ರಾಷ್ಟ್ರೀಯ ನೀತಿ ರೂಪಿಸ ಬೇಕು ಎಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿದೆ.
ಸಂತ್ರಸ್ತೆಯರ ಪುನರ್ವಸತಿಗೆ ನಿರ್ಭಯ ನಿಧಿ ಸ್ಥಾಪಿಸಿರುವುದು ಬಾಯಿ ಮಾತಿನ ಸಹಾನುಭೂತಿ ಮಾತ್ರ ಎಂದು ಟೀಕಿಸಿರುವ ಸುಪ್ರೀಂಕೋರ್ಟ್, ಅತ್ಯಾಚಾರ ಸಂತ್ರಸ್ತೆಯರಿಗೆ ಸಂಬಂಧಿ ಸಿದಂತೆ ರಾಜ್ಯಗಳಲ್ಲಿ ಬೇರೆಬೇರೆ ನೀತಿ ಅನುಸರಿಸಲಾಗುತ್ತಿದೆ. ಆದ್ದರಿಂದ ಒಂದು ರಾಷ್ಟ್ರೀಯ ನೀತಿ ರೂಪಿಸಬೇಕು ಎಂದು ನ್ಯಾಯಮೂರ್ತಿಗಳಾದ ಪಿ. ಸಿ. ಪಂತ್ ಮತ್ತು ಡಿ. ವೈ. ಚಂದ್ರಚೂಡ ಅವನ್ನು ಒಳಗೊಂಡ ರಜಾ ಕಾಲದ ನ್ಯಾಯಪೀಠವು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಅತ್ಯಾಚಾರ ಸಂತ್ರಸ್ತೆಯರಿಗೆ ಸೂಕ್ತ ಪರಿಹಾರ ಒದಗಿಸಲು ನಿರ್ಭಯ ನಿಧಿ ಒಂದೇ ಸಾಲದು. ಆದ್ದರಿಂದ ಸರ್ಕಾರ ಸ್ಪಷ್ಟ ನೀತಿ ರೂಪಿಸಬೇಕು ಎಂದು ನ್ಯಾಯಪೀಠ ಹೇಳಿದೆ. ಅಪರಾಧ ಪ್ರಕ್ರಿಯಾ ಸಂಹಿತೆಯ ಕಲಂ 357(ಎ) ಮತ್ತು ಅತ್ಯಾಚಾರ ಸಂತ್ರಸ್ತರ ಪರಿಹಾರ ಯೋಜನೆಯ ಜಾರಿಯ ಸ್ಥಿತಿ ಹಾಗೂ ಪರಿಹಾರ ಪಡೆದ ಸಂತ್ರಸ್ತೆಯರ ಸಂಖ್ಯೆಯ ವಿವರಗಳನ್ನು ಒಳಗೊಂಡ ವರದಿಯನ್ನು ಮುಂದಿನ ವಿಚಾರಣೆಯ ವೇಳೆಗೆ ಸಲ್ಲಿಸಬೇಕು ಎಂದು ನ್ಯಾಯಪೀಠವು ಸೂಚಿಸಿದೆ.
29 ರಾಜ್ಯಗಳ ಪೈಕಿ ಇದುವರೆಗೆ 25 ರಾಜ್ಯಗಳು ಮಾತ್ರ ಸಂತ್ರಸ್ತರ ಪರಿಹಾರ ಯೋಜನೆಯ ಅಧಿಸೂಚನೆ ಹೊರಡಿಸಿವೆ. ಈ ಯೋಜನೆಗಳು ಏಕರೂಪವಾಗಿ ಇಲ್ಲ ಮತ್ತು ಯೋಜನೆಗೆ ಅಗತ್ಯವಾದ ನಿಧಿಯ ಬಗ್ಗೆ ಸ್ಪಷ್ಟತೆ ಇಲ್ಲ ಎಂದು ಇಂದಿರಾ ಜೈಸಿಂಗ್ ಅವರು ನ್ಯಾಯಪೀಠಕ್ಕೆ ತಿಳಿಸಿದರು. ಕೆಲವು ರಾಜ್ಯಗಳು ಸಂತ್ರಸ್ತೆಯರಿಗೆ 10 ಲಕ್ಷ ರೂಪಾಯಿ ಪರಿಹಾರ ನೀಡಿದರೆ ಕೆಲವು ಕೆಲವು ರಾಜ್ಯಗಳು ಕೇವಲ 50 ಸಾವಿರ ರೂಪಾಯಿ ಪರಿಹಾರ ನೀಡಿವೆ ಎಂದು ತಿಳಿಸಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.