ನವದೆಹಲಿ: ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಪರ ಚುನಾವಣಾ ತಂತ್ರ ರೂಪಿಸುವ ಜವಾಬ್ದಾರಿ ಹೊತ್ತಿರುವ ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಅವರನ್ನು ಭೇಟಿ ಮಾಡಿದ್ದಾರೆ.
ಪ್ರಶಾಂತ್ ಕಿಶೋರ್- ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ ಸಿಂಗ್ ಯಾದವ್ ಭೇಟಿ ಉತ್ತರ ಪ್ರದೇಶದಲ್ಲಿ ಬಿಹಾರ ಮಾದರಿಯ ಮಹಾಮೈತ್ರಿ ಕೂಟ ರಚನೆ ಊಹಾಪೋಹಗಳಿಗೆ ಮತ್ತಷ್ಟು ಪುಷ್ಠಿ ನೀಡಿದಂತಿದೆ. ಮಾಧ್ಯಮಗಳಿಗೆ ಲಭ್ಯವಾಗಿರುವ ಮಾಹಿತಿ ಪ್ರಕಾರ ಸಮಾಜವಾದಿ ಪಕ್ಷದ ಮುಖಂಡ ಅಮರ್ ಸಿಂಗ್ ಸಹ ಸಭೆಯಲ್ಲಿ ಭಾಗವಹಿಸಿದ್ದರು.
ಭೇಟಿಯ ವಿವರಗಳು ಇನ್ನಷ್ಟೇ ಸಿಗಬೇಕಿದ್ದು, ಸಮಾಜವಾದಿ ಪಕ್ಷ ಕಾಂಗ್ರೆಸ್ ನಡುವೆ ಚುನಾವಣಾ ಪೂರ್ವ ಮೈತ್ರಿ ರಚನೆಯಾಗುವ ಸಾಧ್ಯತೆಗಳಿವೆ ಎಂದು ವಿಶ್ಲೇಷಿಸಲಾಗುತ್ತಿದೆ. ಇದಕ್ಕೂ ಮುನ್ನ ಪ್ರಶಾಂತ್ ಕಿಶೋರ್, ಸಮಾಜವಾದಿ ಪಕ್ಷದ ಮುಖಂಡ ಶಿವಪಾಲ್ ಯಾದವ್ ಜೆಡಿಯು ನಾಯಕ ಕೆಸಿ ತ್ಯಾಗಿ ನಿವಾಸದಲ್ಲಿ ಭೇಟಿ ಮಾಡಿ ಚರ್ಚಿಸಿದ್ದಾರೆ ಎಂದು ಹೇಳಲಾಗುತ್ತಿದೆ.