ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೊಂದು ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ದುರ್ಘಟನೆಯಲ್ಲಿ ಮೂವರು ಸಾವನ್ನಪ್ಪಿ 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಪೂರ್ವ ದೆಹಲಿಯ ಶಾಹ್ದರಾ ಪ್ರದೇಶದಲ್ಲಿರುವ ಮೋಹನ್ ಪಾರ್ಕ್ ಸಮೀಪದ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಇಂದು ಮುಂಜಾನೆ ಬೆಂಕಿ ಕಾಣಿಸಿಕೊಂಡಿದ್ದು, ದಟ್ಟ ಹೊಗೆ ಹಾಗು ಬೆಂಕಿಯ ಕೆನ್ನಾಲಿಗೆಯಿಂದಾಗಿ ಮೂವರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಅಂತೆಯೇ 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಮೇಲ್ನೋಟಕ್ಕೆ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಕಟ್ಟಡಕ್ಕೆ ಬೆಂಕಿ ಹೊತ್ತಿತ್ತಾದರೂ ನೋಡ ನೋಡುತ್ತಿದ್ದಂತೆಯೇ ಇಡೀ ಕಟ್ಟಡಕ್ಕೆ ಬೆಂಕಿ ತಗುಲಿದ್ದು, ಕೆಳಭಾಗದಲ್ಲಿದ್ದ 2 ಆಟೋಗಳಿಗೂ ಬೆಂಕಿ ತಗಲಿ ಎರಡೂ ವಾಹನಗಳು ಸಂಪೂರ್ಣ ಭಸ್ಮವಾಗಿವೆ. ವಿಚಾರ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿನಂದಿಸುವ ಕಾರ್ಯದಲ್ಲಿ ತೊಡಗಿದ್ದು, ಈ ವರೆದೂ ಸುಮಾರು 10 ಮಂದಿ ಗಾಯಾಳುಗಳನ್ನು ರಕ್ಷಿಸಿದ್ದಾರೆ. ಅಂತೆಯೇ ಬೆಂಕಿಯನ್ನು ತಹಬದಿಗೆ ತರುವಲ್ಲಿ ಸಿಬ್ಬಂದಿ ಯಶಸ್ವಿಯಾಗಿದ್ದು, ಅವಶೇಷಗಳನ್ನು ತೆರವುಗೊಳಿಸಲಾಗುತ್ತಿದೆ ಎಂದು ತಿಳಿದುಬಂದಿದೆ.
ಇನ್ನು ರಾಜಧಾನಿ ದೆಹಲಿಯಲ್ಲಿ ಇತ್ತೀಚೆಗೆ ಅಗ್ನಿ ಅವಘಡಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದ್ದು, ಇದೇ ಕಾರಣಕ್ಕೆ ದೆಹಲಿಯಲ್ಲಿ ಸುಮಾರು 1500 ಕ್ಕೂ ಹೆಚ್ಚು ಅಗ್ನಿ ಶಾಮಕ ಸಿಬ್ಬಂದಿಗಳನ್ನು ಸನ್ನದ್ಧ ಸ್ಥಿತಿಯಲ್ಲಿರಿಸಲಾಗಿದೆ. ದೆಹಲಿಯ ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಪ್ರದೇಶಗಳನ್ನಾಗಿ ವಿಭಾಗಿಸಿ ಈ 1500 ಸಿಬ್ಬಂದಿಗಳನ್ನು ಆಯಾಕಟ್ಟಿನ ಪ್ರದೇಶಗಳಲ್ಲಿ ನಿಯೋಜಿಸಲಾಗಿದೆ ಎಂದು ತಿಳಿದುಬಂದಿದೆ.