ಲಖನೌ: ಕೆಲವೇ ತಿಂಗಳಲ್ಲಿ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ 'ಮಹಾಗಥಬಂಧನ್' (ಮಹಾ ಮೈತ್ರಿಕೂಟ) ರಚನೆಯಾಗುತ್ತಿಲ್ಲ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಅವರು ಗುರುವಾರ ಸ್ಪಷ್ಟಪಡಿಸಿದ್ದಾರೆ.
ಇಂದು ಮಾಧ್ಯಮದೊಂದಿಗೆ ಮಾತನಾಡಿದ ಮುಲಾಯಂ ಸಿಂಗ್ ಯಾದವ್ ಅವರು, ಚುನಾವಣೆಯಲ್ಲಿ ನಮ್ಮೊಂದಿಗೆ ಸ್ಪರ್ಧಿಸಲು ಬಯಸುವವರು ಅವರ ಪಕ್ಷವನ್ನು ನಮ್ಮ ಪಕ್ಷದೊಂದಿಗೆ ವಿಲೀನಗೊಳಿಸಲಿ ಎಂದು ಹೇಳಿದ್ದಾರೆ.
ಇದೇ ವೇಳೆ ಕೇಂದ್ರ ಸರ್ಕಾರ 500 ಹಾಗೂ 1000 ರುಪಾಯಿ ನೋಟ್ ನಿಷೇಧಿಸಿರುವುದನ್ನು ವಿರೋಧಿಸಿದ ಸಮಾಜವಾದಿ ಪಕ್ಷದ ಮುಖ್ಯಸ್ಥ, ಪ್ರಧಾನಿ ನರೇಂದ್ರ ಮೋದಿ ಅವರು ತೆಗೆದುಕೊಂಡ ಈ ದಿಢೀರ್ ನಿರ್ಧಾರದಿಂದ ದೇಶಾದ್ಯಂತ ಜನಸಾಮಾನ್ಯರು ಪರದಾಡುವಂತಾಗಿದೆ ಎಂದರು.