ನವದೆಹಲಿ: ದುಬಾರಿ ನೋಟಿನ ಮೇಲೆ ಕೇಂದ್ರ ಸರ್ಕಾರ ನಿಷೇಧ ಹೇರಿರುವುದಕ್ಕೆ ವಿರೋಧ ಪಕ್ಷಗಳು ವಿರೋಧ ವ್ಯಕ್ತಪಡಿಸುತ್ತಿರುವುದರ ಬೆನ್ನಲ್ಲೇ ಇದೀಗ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿಯವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಬೆನ್ನಿಗೆ ನಿಂತಿದ್ದು, ನೋಟು ನಿಷೇಧವೊಂದು ಐತಿಹಾಸಿಕ ನಿರ್ಧಾರವಾಗಿದೆ ಎಂದು ಸೋಮವಾರ ಹೇಳಿದ್ದಾರೆ.
ಈ ಕುರಿತಂತೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಅವರು, ರು.500 ಹಾಗೂ 1,000 ನೋಟಿನ ಮೇಲೆ ನಿಷೇಧ ಹೇರಿರುವುದು ಸಾಮಾನ್ಯ ನಿರ್ಧಾರವಲ್ಲ. ನಿಷೇಧ ಹೇರಿಕೆಯಿಂದ ಸಾಮಾನ್ಯವಾಗಿಯೇ ಜನರಿಗೆ ಸಮಸ್ಯೆಗಳು ಎದುರಾಗುತ್ತದೆ. ಆದರೆ, ಭವಿಷ್ಯದಲ್ಲಿ ದೇಶಕ್ಕೆ ಉತ್ತಮ ಬೆಳವಣಿಗೆಯನ್ನು ತಂದುಕೊಡಲಿದೆ. ಮೋದಿಯವರು ಈ ನಿರ್ಧಾರ ಐತಿಹಾಸಿಕ ನಿರ್ಧಾರವಾಗಿದೆ ಎಂದು ಹೇಳಿದ್ದಾರೆ.
ಈ ಹಿಂದಷ್ಟೇ ಬಿಹಾರ ರಾಜ್ಯ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಹಾಗೂ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ಬಹಿರಂಗವಾಗಿಯೇ ಮೋದಿಯವರ ನೋಟು ನಿಷೇಧಕ್ಕೆ ಬೆಂಬಲವನ್ನು ವ್ಯಕ್ತಪಡಿಸಿದ್ದರು. ಕೇಂದ್ರ ಸರ್ಕಾರ ಈ ನಡೆ ಭ್ರಷ್ಟಾಚಾರ ಹಾಗೂ ಭಯೋತ್ಪಾದನಾ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಸಹಾಯಕವಾಗಲಿದೆ ಎಂದು ಹೇಳಿದ್ದರು.