ನವದೆಹಲಿ: ಆಡಳಿತಾತ್ಮಕವಾಗಿ ಕುಸಿದಿರುವ ತಮಿಳುನಾಡಿನಲ್ಲಿ ರಾಷ್ಟ್ರಪತಿ ಆಡಳಿತ ಹೇರುವಂತೆ ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಆಗ್ರಹಿಸಿದ್ದಾರೆ.
ತಮಿಳುನಾಡು ಸಿಎಂ ಜಯಲಲಿತಾ ಅವರ ಅನಾರೋಗ್ಯದಿಂದಾಗಿ ಆಸ್ಪತ್ರೆ ಸೇರಿದ್ದು, ಇದೀಗ ರಾಜ್ಯದಲ್ಲಿ ಆಡಳಿತ ಸಂಪೂರ್ಣ ಕುಸಿದಿದೆ. ಹೀಗಾಗಿ ತಮಿಳುನಾಡಿನಲ್ಲಿ ರಾಷ್ಟ್ರಪತಿ ಆಡಳಿತ ಹೇರುವಂತೆ ಸುಬ್ರಮಣಿಯನ್ ಸ್ವಾಮಿ ಅವರು ರಾಜನಾಥ್ ಸಿಂಗ್ ಅವರಿಗೆ ಪತ್ರ ಬರೆದಿದ್ದಾರೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸುಬ್ರಮಣಿಯನ್ ಸ್ವಾಮಿ, ತಮಿಳುನಾಡಿನಲ್ಲಿ ಆಡಳಿತ ಯಂತ್ರ ಸಂಪೂರ್ಣ ಕುಸಿತಗೊಂಡಿದೆ. ಇಂತಹ ಪರಿಸ್ಥಿತಿಯಲ್ಲಿ ತಮಿಳುನಾಡಿನ ತಿರುನಲ್ವೇಲಿ, ರಾಮನಾಥಪುರಂ, ಮಧುರೈ ಮತ್ತು ಕನ್ಯಾಕುಮಾರಿ ಸೇರಿದಂತೆ ಇನ್ನೂ ಹಲವು ಸೂಕ್ಷ್ಮ ಪ್ರದೇಶಗಳಲ್ಲಿರುವ ಇಸಿಸ್ ನ ಸ್ಲೀಪರ್ ಸೆಲ್ ಘಟಕಗಳು ಕಾರ್ಯಪ್ರವೃತ್ತವಾಗಿದ್ದು, ರಾಜ್ಯದಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಹವಣಿಸುತ್ತಿವೆ.
ಅಂತೆಯೇ ಎಲ್ ಟಿಟಿಇ, ಮಾವೋವಾದಿಯಂತಹ ಭೂಗತ ನಕ್ಸಲ್ ಸಂಘಟನೆಗಳೂ ಕೂಡ ತಮ್ಮ ವಿಧ್ವಂಸಕ ಕೃತ್ಯಗಳನ್ನು ನಡೆಸಲು ಹುನ್ನಾರ ನಡೆಸಿವೆ. ಹೀಗಾಗಿ ನಾನು ಸಂವಿಧಾನದ 356ನೇ ಕಲಮಿನ ಪ್ರಕಾರ ತಮಿಳುನಾಡು ವಿಧಾನಸಭೆಯನ್ನು ತಾತ್ಕಾಲಿಕವಾಗಿ ಅಮಾನತ್ತಿನಲ್ಲಿಟ್ಟು ರಾಷ್ಟ್ರಪತಿ ಆಡಳಿತ ಹೇರುವಂತೆ ಮನವಿ ಮಾಡುತ್ತಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.