ಶ್ರೀನಗರ: ಕಾಶ್ಮೀರದಲ್ಲಿ ಮತ್ತೆ ಹಿಂಸಾಚಾರ ಆರಂಭವಾಗಿದ್ದು, 13 ವರ್ಷದ ಬಾಲಕನೋರ್ವ ಮೃತಪಟ್ಟಿರುವ ಘಟನೆ ಶನಿವಾರ ನಡೆದಿದೆ.
ಶ್ರೀನಗರದ ಸೈದ್ಪುರ ಪ್ರದೇಶದ ನಿವಾಸಿಯಾಗಿರುವ ಜುನೈದ್ ಅಹ್ಮದ್ ಭಟ್ ಮೃತ ಬಾಲಕ. ನಿನ್ನೆ ನಡೆದ ಹಿಂಸಾಚಾರದಲ್ಲಿ ಬಾಲಕ ಗಂಭೀರವಾಗಿ ಗಾಯಗೊಂಡಿದ್ದ. ಬಾಲಕನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾನೆಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇದರಂತೆ ಕಾಶ್ಮೀರದಲ್ಲಿ ಕಳೆದ ಮೂರು ತಿಂಗಳಿಂದ ನಡೆಯುತ್ತಿರುವ ಹಿಂಸಾಚಾರಕ್ಕೆ 91 ಮಂದಿ ಬಲಿಯಾಗಿದ್ದಾರೆ.
ನಿನ್ನೆ ಶುಕ್ರವಾರವಾದ್ದರಿಂದ ಪುಲ್ವಾಮ, ಶೋಪಿಯಾನ್ ಮತ್ತು ಉತ್ತರ ಕಾಶ್ಮೀರದ ಹಲವು ಜಿಲ್ಲೆಗಳಲ್ಲಿ ಪ್ರಾರ್ಥನೆ ಸಲ್ಲಿಸಲಾಗುತ್ತಿತ್ತು. ಈ ವೇಳೆ ಪ್ರತಿಭಟನಾಕಾರರು ಹಾಗೂ ಭದ್ರತಾ ಸಿಬ್ಬಂದಿಗಳ ನಡುವೆ ಘರ್ಷಣೆ ಏರ್ಪಟ್ಟಿತ್ತು ಎಂದು ತಿಳಿದುಬಂದಿದೆ.
ಮತ್ತೆ ಹಿಂಸಾಚಾರ ಭುಗಿಲೆದ್ದ ಹಿನ್ನೆಲೆಯಲ್ಲಿ ಶೈಕ್ಷಣಿಕ ಸಂಸ್ಥೆಗಳು, ಸಾರ್ವಜನಿಕ ಸಾರಿಗೆ ಸಂಪರ್ಕ ಮತ್ತು ಮಾರುಕಟ್ಟೆಗಳ ವ್ಯಾಪಾರ ಹಾಗೂ ವ್ಯವಹಾರಗಳನ್ನು ಬಂದ್ ಮಾಡಲಾಗಿದೆ. ಇದಲ್ಲದೆ, ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ ಎಂದು ಮೂಲಗಳಿಂದ ತಿಳಿಸಿವೆ.
21 ವರ್ಷದ ಬುರ್ಹಾನ್ ಮುಜಾಫರ್ ವಾನಿ ಮತ್ತು ಆತನ ಇಬ್ಬರು ಸಹಚರರನ್ನು ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಯೋಧರು ಹತ್ಯೆ ಮಾಡಿದ್ದರು. ಇದರಂತೆ ಬುರ್ಹಾನ್ ವಾನಿ ಹತ್ಯೆ ಖಂಡಿಸಿ ಜುಲೈ.9 ರಿಂದಲೂ ಕಾಶ್ಮೀರದಲ್ಲಿ ಹಿಂಸಾಚಾರ ಭುಗಿಲೆದ್ದಿದೆ.