ಶ್ರೀನಗರ: ಉಗ್ರ ಬುರ್ಹಾನ್ ವಾನಿ ಹತ್ಯೆ ಖಂಡಿಸಿ ಕಾಶ್ಮೀರದಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಅಧಿಕಾರಿಗಳು ಮೊಹರಂ ಮೆರವಣಿಗೆಗೆ ತಡೆಯೊಡ್ಡಿ ಶ್ರೀನಗರದ ಹಲವೆಡೆ ಬುಧವಾರ ನಿಷೇಧಾಜ್ಞೆಯನ್ನು ಜಾರಿ ಮಾಡಿದ್ದಾರೆ.
ಮತ್ತೆ ಹಿಂಸಾಚಾರ ಮರುಕಳಿಸದಂತೆ ಎಚ್ಚರಿಕೆ ವಹಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಮೊಹರಂ ಮೆರವಣಿಗೆಗೂ ತಡೆಯೊಡ್ಡಲಾಗಿದೆ. ಶ್ರೀನಗರದ ಸೇರಿದಂತೆ ಹಲವೆಡೆ ಈಗಾಗಲೇ ಸೆಕ್ಷನ್ 144 ಜಾರಿ ಮಾಡಲಾಗಿದ್ದು, ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಹೇಳಿದ್ದಾರೆ.
21 ವರ್ಷದ ಬುರ್ಹಾನ್ ಮುಜಾಫರ್ ವಾನಿ ಮತ್ತು ಆತನ ಇಬ್ಬರು ಸಹಚರರನ್ನು ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಯೋಧರು ಹತ್ಯೆ ಮಾಡಿದ್ದರು. ಇದರಂತೆ ಬುರ್ಹಾನ್ ವಾನಿ ಹತ್ಯೆ ಖಂಡಿಸಿ ಜುಲೈ.9 ರಿಂದಲೂ ಕಾಶ್ಮೀರದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಹಿಂಸಾಚಾರದಲ್ಲಿ ಈ ವರೆಗೂ 91 ಮಂದಿ ಸಾವನ್ನಪ್ಪಿದ್ದು, 12,000ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.