ಮರಾಠ-ದಲಿತರ ನಡುವೆ ಸಂಘರ್ಷ: ಪುಣೆಯಲ್ಲಿ ಪರಿಸ್ಥಿತಿ ಉದ್ವಿಗ್ನ, ಹಲವರಿಗೆ ಗಾಯ
ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ನೀಡುವಂತೆ ಆಗ್ರಹಿಸಿ ಮರಾಠರು ಕೆಲ ದಿನಗಳ ಹಿಂದೆ ಪುಣೆಯಲ್ಲಿ ನಡೆಸಿದ್ದ ಬೃಹತ್ ರ್ಯಾಲಿ ಹಿನ್ನೆಲೆಯಲ್ಲಿ ಗುರುವಾರ ಮರಾಠ ಸಮುದಾಯದ ಸದಸ್ಯರು ಹಾಗೂ ದಲಿತರ ನಡುವೆ ಸಂಘರ್ಷ ಏರ್ಪಟ್ಟಿದೆ...
ಪುಣೆ: ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ನೀಡುವಂತೆ ಆಗ್ರಹಿಸಿ ಮರಾಠರು ಕೆಲ ದಿನಗಳ ಹಿಂದೆ ಪುಣೆಯಲ್ಲಿ ನಡೆಸಿದ್ದ ಬೃಹತ್ ರ್ಯಾಲಿ ಹಿನ್ನೆಲೆಯಲ್ಲಿ ಗುರುವಾರ ಮರಾಠ ಸಮುದಾಯದ ಸದಸ್ಯರು ಹಾಗೂ ದಲಿತರ ನಡುವೆ ಸಂಘರ್ಷ ಏರ್ಪಟ್ಟಿದೆ. ಪರಿಣಾಮ ಪುಣೆಯಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕಾಯ್ದೆಯನ್ನು ರದ್ದು ಪಡಿಸಬೇಕೆಂದು ಆಗ್ರಹಿಸಿ ಪುಣೆಯಲ್ಲಿ ಬೃಹತ್ ರ್ಯಾಲಿಯನ್ನು ನಡೆಸಲಾಗಿತ್ತು. ಇದರ ಹಿನ್ನೆಲೆಯಲ್ಲಿ ಲೋಹೇಗಾಂವ್ ಪ್ರದೇಶದಲ್ಲಿ ಮರಾಠ ಸಮುದಾಯದವರು ಹಾಗೂ ದಲಿತರ ನಡುವೆ ಸಂಘರ್ಷ ಏರ್ಪಟ್ಟಿದೆ ಎಂದು ಖಾಸಗಿ ಮಾಧ್ಯಮವೊದು ವರದಿ ಮಾಡಿದೆ.
ಎಸ್'ಸಿ/ಎಸ್'ಟಿ ಕಾಯ್ದೆಯನ್ನು ರದ್ದುಪಡಿಸುವಂತೆ ಆಗ್ರಹಿಸಿ ಮರಾಠ ಸಮುದಾಯದವರು ಇಂದು ಲೋಹೇಗಾಂವ್ ಪೊಲೀಸ್ ಠಾಣೆಗೆ ಮೆರವಣಿಗೆ ನಡೆಸಿದ್ದರು. ಇದರಿಂದ ತೀವ್ರವಾಗಿ ಕೆಂಡಾಮಂಡಲಗೊಂಡ ದಲಿತರು ಮರಾಠರೊಂದಿಗೆ ಸಂಘರ್ಷಕ್ಕೆ ಇಳಿದಿದ್ದಾರೆ. ಕೂಡಲೇ ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಘಟನೆ ವೇಳೆ ಹಲವರಿಗೆ ಗಾಯಗಳಾಗಿರುವುದಾಗಿ ತಿಳಿದುಬಂದಿದೆ.
ಮರಾಠರ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿರುವುದಕ್ಕೆ ವಿರೋಧ ವ್ಯಕ್ತಪಡಿಸಿ ನಾಶಿಕ್ ನಲ್ಲಿ ನಡೆಸಲಾಗುತ್ತಿರುವ ಬಂದ್ 5ನೇ ದಿನಕ್ಕೆ ಕಾಲಿಟ್ಟಿದೆ. ಇದರ ನಡುವೆಯೇ ಇದೀಗ ಮತ್ತೊಂದು ಸಂಘರ್ಷ ನಡೆದಿದೆ. ಪ್ರಸ್ತುತ ನಾಶಿಕ್ ನಲ್ಲಿ ಶಾಲಾ-ಕಾಲೇಜುಗಳನ್ನು ಮುಚ್ಚಲಾಗಿದ್ದು, ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ವರದಿಗಳು ತಿಳಿಸಿವೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.