ಉತ್ತರ ಪ್ರದೇಶ: ಬಿಜೆಪಿ ಸೇರಿದ ಕಾಂಗ್ರೆಸ್ ನಾಯಕಿ ರೀಟಾ ಬಹುಗುಣ ಜೋಷಿ
ಉತ್ತರ ಪ್ರದೇಶ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇದ್ದು, ಕಾಂಗ್ರೆಸ್ ನಾಯಕಿ ರೀಟಾ ಬಹುಗುಣಾ ಜೋಷಿ ಅ.20 ರಂದು ಬಿಜೆಪಿ ಸೇರ್ಪಡೆಯಾಗಿದ್ದಾರೆ.
ನವದೆಹಲಿ: ಉತ್ತರ ಪ್ರದೇಶ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇದ್ದು, ಕಾಂಗ್ರೆಸ್ ನಾಯಕಿ ರೀಟಾ ಬಹುಗುಣಾ ಜೋಷಿ ಅ.20 ರಂದು ಬಿಜೆಪಿ ಸೇರ್ಪಡೆಯಾಗಿದ್ದಾರೆ.
ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ನೇತೃತ್ವದಲ್ಲಿ ರೀಟಾ ಬಹುಗುಣಾ ಜೋಷಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಕಳೆದ 24 ವರ್ಷಗಳಿಂದ ಕಾಂಗ್ರೆಸ್ ನೊಂದಿಗೆ ಗುರುತಿಸಿಕೊಂಡಿದ್ದ ರೀಟಾ ಬಹುಗುಣಾ ಜೋಷಿ, ಬಿಜೆಪಿ ಸೇರ್ಪಡೆಯಾಗುವುದು ಸುಲಭದ ನಿರ್ಧಾರವಾಗಿರಲಿಲ್ಲ. ಆದರೆ ಉತ್ತರ ಪ್ರದೇಶ ಹಾಗೂ ದೇಶದ ಹಿತದೃಷ್ಟಿಯಿಂದ ಬಿಜೆಪಿ ಸೇರ್ಪಡೆಗೊಂಡಿರುವುದಾಗಿ ತಿಳಿಸಿದ್ದಾರೆ.
ಉತ್ತರ ಪ್ರದೇಶ ಕಾಂಗ್ರೆಸ್ ನ ಮಾಜಿ ಅಧ್ಯಕ್ಷೆಯಾಗಿದ್ದ ರೀಟಾ ಬಹುಗುಣಾ ಜೋಷಿ ಬಿಜೆಪಿ ಸೇರ್ಪಡೆಯಾಗಿರುವ ಹಿನ್ನೆಲೆಯಲ್ಲಿ ತಮ್ಮ ಶಾಸಕ ಸ್ಥಾನಕ್ಕೆ ಹಾಗೂ ಕಾಂಗ್ರೆಸ್ ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವುದಾಗಿ ತಿಳಿಸಿದ್ದಾರೆ. ಇದೆ ವೇಳೆ ಸೆ.29 ರಂದು ಭಾರತೀಯ ಸೇನೆ ನಡೆಸಿದ ಸೀಮಿತ ದಾಳಿಗೆ ಸಂಬಂಧಿಸಿದಂತೆಯೂ ಮಾತನಾಡಿರುವ ಅವರು, ಪಾಕ್ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ಭಾರತೀಯ ಸೇನೆ ನಡೆಸಿದ ದಾಳಿಯನ್ನು ಸರ್ಕಾರದ ಹಾಗೂ ಸೇನೆಯ ಸಾಧನೆ ಎಂದು ಬಣ್ಣಿಸಿದ್ದಾರೆ. ರೀಟಾ ಬಹುಗುಣಾ ಜೋಷಿ ಅವರ ಸಹೋದರ ಉತ್ತರಾಖಂಡ್ ನ ಮಾಜಿ ಮುಖ್ಯಮಂತ್ರಿ ವಿಜಯ್ ಬಹುಗುಣಾ ಇತ್ತೀಚೆಗಷ್ಟೇ ಬಿಜೆಪಿ ಸೇರ್ಪಡೆಯಾಗಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.