ತಿರುವನಂತಪುರ: ಸೌಮ್ಯ ಕೊಲೆ ಪ್ರಕರಣದಲ್ಲಿ ಕೇರಳ ಸರ್ಕಾರ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸುವಲ್ಲಿ ವಿಫಲವಾಗಿದೆ ಎಂದು ಕೇರಳ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ವಿ.ಎಂ ಸುಧೀರ ಆರೋಪಿಸಿದ್ದಾರೆ.
ಕೊಲೆ ಪ್ರಕರಣದ ಪ್ರಮುಖ ಅಪರಾಧಿ ಗೋವಿಂದಚಾಮಿಗೆ ನೀಡಿದ್ದ ಗಲ್ಲು ಶಿಕ್ಷೆಯನ್ನು ಸುಪ್ರೀಂ ಕೋರ್ಟ್ 7 ವರ್ಷಗಳ ಕಠಿಣ ಶಿಕ್ಷೆಗೆ ಬದಲಾಯಿಸಿ ಆದೇಶ ಹೊರಡಿಸಿದ ಬೆನ್ನಲ್ಲೇ ಸುದೀರ ಪಿಣರಾಯಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ನ್ಯಾಯಾಲಯ ನೀಡಿರುವ ತೀರ್ಪನ್ನು ಪ್ರಶ್ನಿಸಿ ಪರಿಶೀಲನಾ ಅರ್ಜಿಯನ್ನು ಸರ್ಕಾರ ಸಲ್ಲಿಸಬೇಕು ಎಂದು ಸಿಪಿಎಂ ರಾಜ್ಯ ಕಾರ್ಯದರ್ಶಿ ಕೊಡಿಯೇರಿ ಬಾಲಕೃಷ್ಣ ಒತ್ತಾಯಿಸಿದ್ದಾರೆ. ಕೇರಳ ಸರ್ಕಾರ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಬೇಕೆಂದು ಆಗ್ರಹಿಸಿದ್ದಾರೆ.
ನ್ಯಾಯಾಲಯ ನೀಡಿರುವ ತಿರ್ಪಿಗೆ ಸೌಮ್ಯ ತಾಯಿ ತೀವ್ರ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ. ತಮ್ಮ ಮಗಳ ಸಾವಿಗೆ ನ್ಯಾಯ ಸಿಕ್ಕಿಲ್ಲ ಎಂದು ದೂರಿದ್ದಾರೆ.
2011ರ ಫೆಬ್ರವರಿ 1 ರಂದು ಚಲಿಸುತ್ತಿದ್ದ ಎರ್ನಾಕುಲಂ- ಶೋರನೂರ್ ರೈಲಿನಿಂದ ಸೌಮ್ಯ ಎಂಬ ಯುವತಿಯನ್ನು ತಳ್ಳಿ ಆಕೆಯ ಮೇಲೆ ಮಾರಣಾಂತಿಕವಾಗಿ ಅತ್ಯಾಚಾರ ನಡೆಸಲಾಗಿತ್ತು. ತೀವ್ರ ಗಾಯಗಳಿಂದಾಗಿ ಆಸ್ಪತ್ರೆಯಲ್ಲಿ ಆಕೆ ಸಾವನ್ನಪ್ಪಿದ್ದಳು. ಈ ಸಂಬಂಧ ಗೋವಿಂದಚಾಮಿ ಎಂಬ ಪ್ರಮುಖ ಆರೋಪಿಗೆ ವಿಚಾರಣಾಧೀನ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿತ್ತು, ನಂತರ ಇದನ್ನು ಪ್ರಶ್ನಿಸಿ ಕೇರಳ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಾಗಿತ್ತು. ಕೇರಳ ಹೈಕೋರ್ಟ್ ಅಧೀನ ನ್ಯಾಯಾಲಯದ ಆದೇಶವನ್ನು ಎತ್ತಿ ಹಿಡಿದಿತ್ತು.
ನಂತರ 2014 ಜುಲೈ 30 ರಂದು ಕೇರಳ ಹೈಕೋರ್ಟ್ ಎತ್ತಿ ಹಿಡಿದಿದ್ದ ಗಲ್ಲು ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿತ್ತು. ಸುದೀರ್ಘ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಪ್ರಕರಣಕ್ಕೆ ಸಾಕ್ಷ್ಯಾಧಾರಗಳ ಕೊರತೆ ಇದೆ ಎಂದು ಹೇಳಿ ಗಲ್ಲು ಶಿಕ್ಷೆಯನ್ನು ರದ್ದು ಪಡಿಸಿ 7 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ಆದೇಶ ನೀಡಿದೆ.