ನವದೆಹಲಿ: ಪಾಕಿಸ್ತಾನ ಮೂಲದ ಉಗ್ರ ಸಂಘಟನೆಗಳು ಪೈಶಾಚಿತ ಕೃತ್ಯವೆಸಗಲು ಸಂಚು ರೂಪಿಸಿದ್ದು, ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ದೇಶದಾದ್ಯಂತ ಹೈ ಅಲರ್ಟ್ ಘೋಷಣೆ ಮಾಡಿದೆ ಎಂದು ಶುಕ್ರವಾರ ತಿಳಿದುಬಂದಿದೆ.
ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಉಗ್ರ ನೆಲೆಗಳ ಮೇಲೆ ಭಾರತೀಯ ಸೇನೆ ನಡೆಸಿದ ಸೀಮಿತ ದಾಳಿ ಹಿನ್ನೆಲೆಯಲ್ಲಿ ಭಾರತದಲ್ಲಿ ವಿಧ್ವಂಸಕ ಕೃತ್ಯವೆಸಗಲು ಉಗ್ರರು ತಯಾರಿ ನಡೆಸಿದ್ದು, ದೇಶದಾದ್ಯಂತ ತೀವ್ರ ಕಟ್ಟೆಚ್ಚರ ವಹಿಸುವಂತೆ ಅಧಿಕಾರಿಗಳಿಗೆ ಕೇಂದ್ರ ಸೂಚನೆ ನೀಡಿದೆ ಎಂದು ಹೇಳಲಾಗುತ್ತಿದೆ.
ಸೂಕ್ಷ್ಮ ಪ್ರದೇಶಗಳು, ಜನನಿಬಿಡ ಪ್ರದೇಶಗಳಾದ ಮಾರುಕಟ್ಟೆ, ಧಾರ್ಮಿಕ ಕ್ಷೇತ್ರಗಳು ಸೇರಿದಂದೆ ಇನ್ನಿತರೆ ಪ್ರದೇಶಗಳಲ್ಲಿ ಭದ್ರತೆಯನ್ನು ಹೆಚ್ಚುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಸೀಮಿತ ದಾಳಿ ಹಿನ್ನೆಲೆಯಲ್ಲಿ ಭಾರತದ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳಲು ಪಾಕಿಸ್ತಾನ ಸತತವಾಗಿ ಯತ್ನ ನಡೆಸುತ್ತಿದ್ದು, ಇದಕ್ಕೆ ಉಗ್ರ ಸಂಘಟನೆಗಳನ್ನು ಬಳಸಿಕೊಳ್ಳುತ್ತಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಕಟ್ಟೆಚ್ಚರ ವಹಿಸುವಂತೆ ಗೃಹ ಇಲಾಖೆ ಎಲ್ಲಾ ರಾಜ್ಯಗಳ ಅಧಿಕಾರಿಗಳಿಗೆ ಸೂಚನೆ ನೀಡಿದೆ ಎನ್ನಲಾಗಿದೆ.