ಲಕ್ನೋ: ಅಕ್ರಮ ಕಸಾಯಿಖಾನೆಗಳ ವಿರುದ್ಧ ಮಾಡುತ್ತಿರುವ ಹೋರಾಟದಲ್ಲಿ ಯಾವುದೇ ರಾಜಿ ಇಲ್ಲ, ಅವುಗಳ ವಿರುದ್ಧದ ಶಿಸ್ತುಕ್ರಮ ಮುಂದುವರಿಯುತ್ತದೆ ಎಂದು ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರ ತಿಳಿಸಿದೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಮಾತನಾಡಿದ ಉತ್ತರ ಪ್ರದೇಶ ಆರೋಗ್ಯ ಸಚಿವ ಸಿದ್ದಾರ್ಥ ನಾಥ್ ಸಿಂಗ್ ರಾಜ್ಯದಲ್ಲಿರುವ ಅಕ್ರಮ ಕಸಾಯಿಖಾನೆಗಳನ್ನು ಬಂದ್ ಮಾಡಿಸುವ ವಿಷಯದಲ್ಲಿ ಯಾವುದೇ ರಾಜಿಯಿಲ್ಲ ಎಂದು ಹೇಳಿದ್ದಾರೆ.
ರಾಷ್ಟ್ರೀಯ ಹಸಿರು ಮಂಡಳಿಯ ಮಾರ್ಗಸೂಚಿಯಂತೆ ಅಕ್ರಮ ಕಸಾಯಿಖಾನೆಗಳ ವಿರುದ್ಧ ನಮ್ಮ ಹೋರಾಟ ಮುಂದುವರಿಯುತ್ತದೆ ಎಂದು ತಿಳಿಸಿದ್ದಾರೆ.
ಪರವಾನಗಿ ಪಡೆದು ಮಾರ್ಗಸೂಚಿ ಅನ್ವಯ ಮಾಂಸ ಮಾರಾಟ ಮಾಡುತ್ತಿರುವವರಿಗೆ ಸರ್ಕಾರ ಯಾವುದೇ ಕಿರುಕುಳ ನೀಡಬಾರದೆಂದು ಸ್ಪಷ್ಟ ಪಡಿಸಿದೆ ಎಂದು ಅವರು ತಿಳಿಸಿದ್ದಾರೆ.
ಉತ್ತರ ಪ್ರದೇಶ ಸಿಎಂ ಆಗಿ ಯೋಗಿ ಆದಿತ್ಯ ನಾಥ್ ಅಧಿಕಾರ ವಹಿಸಿಕೊಂಡ ನಂತರ ಅಪಾರ ಪ್ರಮಾಣದಲ್ಲಿ ಅಕ್ರಮ ಕಸಾಯಿಖಾನೆಗಳನ್ನು ಮುಚ್ಚಿಸಲಾಗುತ್ತಿದೆ.
ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಪ್ರಣಾಳಿಕೆಯಲ್ಲಿ ಅಕ್ರಮ ಕಸಾಯಿ ಖಾನೆ ಮುಚ್ಚಿಸುವುದಾಗಿ ಬಿಜೆಪಿ ಭರವಸೆ ನೀಡಿತ್ತು.