ನವದೆಹಲಿ: ರಾಜಸ್ತಾನದಲ್ಲಿ ಗೋರಕ್ಷಕರು ವ್ಯಕ್ತಿಯೊಬ್ಬನನ್ನು ಹೊಡೆದು ಸಾಯಿಸಿದ ಘಟನೆಯನ್ನು ಧರ್ಮದ ಹಿನ್ನೆಲೆಯಲ್ಲಿ ನೋಡಬೇಡಿ. 'ಅಪರಾಧಿ ಅಪರಾಧಿನೇ' ಎಂದು ಕೇಂದ್ರ ಅಲ್ಪ ಸಂಖ್ಯಾತ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಅವರು ಶುಕ್ರವಾರ ಹೇಳಿದ್ದಾರೆ.
ಅಲ್ವಾರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ರಾಜ್ಯಸಭೆಯಲ್ಲಿ ಪ್ರತಿಕ್ರಿಯಿಸಿದ ನಖ್ವಿ, ಗೋವು ಸಾಗಿಸುತ್ತಿದ್ದ ವ್ಯಕ್ತಿಯನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ತಿಳಿಸಿದರು.
ನಿನ್ನೆ ಗೋರಕ್ಷಕರಿಂದ ಯಾವುದೇ ಹತ್ಯೆ ನಡೆದಿಲ್ಲ ಎಂದು ನಖ್ವಿ ಹೇಳಿದ್ದರು. ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ಪ್ರತಿಪಕ್ಷಗಳು ಸದನಕ್ಕೆ ತಪ್ಪು ಮಾಹಿತಿ ನೀಡಿದ ಸಚಿವ ನಖ್ವಿ ಅವರು ಈ ಕೂಡಲೇ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದವು.
ಕ್ಷಮೆ ಕೇಳಲು ನಿರಾಕರಿಸಿದ ನಖ್ವಿ ಅವರು, ಈ ಕುರಿತು ಸೋಮವಾರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಹೇಳಿಕೆ ನೀಡಲಿದ್ದಾರೆ ಎಂದು ಹೇಳಿದರು. ಅಲ್ಲದೆ ಇದು ಅತ್ಯಂತ ಸೂಕ್ಷ್ಮ ವಿಷಯವಾಗಿದ್ದು, ಈ ವಿಚಾರದಲ್ಲಿ ಅಪರಾಧಿಗಳನ್ನು ಧಾರ್ಮಿಕ ಹಿನ್ನಲೆಯಲ್ಲಿ ಗುರುತಿಸಬಾರದು ಎಂದರು.
ಕಳೆದ ಶನಿವಾರ ರಾಜಸ್ತಾನದ ಅಲ್ವಾರ್ ನಲ್ಲಿ ಗೋವು ಸಾಗಿಸುತ್ತಿದ್ದ ಮುಸ್ಲಿಂ ವ್ಯಕ್ತಿಯನ್ನು ಗೋರಕ್ಷಕರು ಹಲ್ಲೆ ನಡೆಸಿದ್ದರು. ಗಂಭೀರವಾಗಿ ಗಾಯಗೊಂಡಿದ್ದ 50 ವರ್ಷದ ಪೆಹಲು ಖಾನ್ ಸೋಮವಾರ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics