ಪ್ರಧಾನಮಂತ್ರಿ ನರೇಂದ್ರ ಮೋದಿ
ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿರುವ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿಯವರಿಗೆ ಕರೆ ಮಾಡಿ ಮಾತನಾಡಿದ್ದು, ಕೇಂದ್ರ ವತಿಯಿಂದ ಅಗತ್ಯ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆಂದು ಶುಕ್ರವಾರ ತಿಳಿದುಬಂದಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಹಲವು ದಿನಗಳಿಂದಲೂ ಸುಧೀರ್ಘವಾಗಿ ಭಾರೀ ಹಿಮಪಾತ ಹಾಗೂ ಮಳೆಯಾಗುತ್ತಿದ್ದು, ಈ ಹಿನ್ನಲೆಯಲ್ಲಿ ಪ್ರವಾಹ ಭೀತಿ ಎದುರಾಗಿದೆ. ಇದರಂತೆ ನಿನ್ನೆ ಮುಫ್ತಿಯವರು ಸಚಿವರೊಂದಿಗೆ ಉನ್ನತ ಮಟ್ಟದ ಸಭೆ ಕರೆದು ಪರಿಸ್ಥಿತಿ ವರದಿಯನ್ನು ಪಡೆದುಕೊಂಡಿದ್ದರು.
ಪ್ರವಾಹ ಭೀತಿ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿದ್ದು, ಕಾಶ್ಮೀರ ಪರಿಸ್ಥಿತಿ ಕುರಿತಂತೆ ಈಗಾಗಲೇ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿಯವರೊಂದಿಗೆ ಮಾತುಕತೆ ನಡೆಸಲಾಗಿದ್ದು, ಕೇಂದ್ರದ ವತಿಯಿಂದ ಸಾಧ್ಯವಾದಷ್ಟು ನೆರವು ನೀಡುವುದಾಗಿ ತಿಳಿಸಲಾಗಿದೆ ಎಂದು ಹೇಳಿದ್ದಾರೆ.