ನವದೆಹಲಿ: ಬೆಂಗಳೂರಿನ ಈಗಲ್ ಟನ್ ರೆಸಾರ್ಟ್ ಹಾಗೂ ಇಂಧನ ಸಚಿವ ಡಿಕೆ ಶಿವಕುಮಾರ್ ನಿವಾಸ, ಕಚೇರಿಗಳ ಮೇಲೆ ಐಟಿ ದಾಳಿ ನಡೆದಿರುವ ಪ್ರಕರಣ ರಾಜ್ಯಸಭೆಯಲ್ಲಿ ಕೋಲಾಹಲ ಉಂಟು ಮಾಡಿದೆ.
ಆ.2 ರ ರಾಜ್ಯಸಭೆ ಕಲಾಪದಲ್ಲಿ ರಾಜ್ಯಸಭೆಯ ಕಾಂಗ್ರೆಸ್ ನ ನಾಯಕರು ಡಿಕೆ ಶಿವಕುಮಾರ್ ನಿವಾಸ, ಕಚೇರಿಯ ಮೇಲೆ ಐಟಿ ದಾಳಿ ನಡೆಸಿರುವ ಪ್ರಕರಣವನ್ನು ಪ್ರಸ್ತಾಪಿಸಿ ಕೇಂದ್ರ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿರುವ ಕಾಂಗ್ರೆಸ್ ಸದಸ್ಯರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದು, " ನಾವು ಹಣ ಹಂಚುತ್ತಿಲ್ಲ, ಆದರೂ ನಮ್ಮ ಮೇಲೆ ದಾಳಿ ನಡೆಸಲಾಗುತ್ತಿದೆ: ಹಣ ಹಂಚುತ್ತಿರುವ ಬಿಜೆಪಿ ನಾಯಕರ ಮೇಲೆ ಐಟಿ ದಾಳಿ ನಡೆಯಲಿ" ಎಂದು ಕಾಂಗ್ರೆಸ್ ಸದಸ್ಯರು ಘೋಷಣೆ ಕೂಗಿದ್ದಾರೆ.
ಗುಜರಾತ್ ರಾಜ್ಯಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕರನ್ನು ಬೆದರಿಸಲು ಐಟಿ ದಾಳಿ ನಡೆಸಲಾಗಿದೆ. ಹಣ ಹಂಚುತ್ತಿರುವವರು ನಾವಲ್ಲ, ಬಿಜೆಪಿಯವರು ಎಂದು ರಾಜ್ಯಸಭೆ ಪ್ರತಿಪಕ್ಷ ನಾಯಕ ಗುಲಾಂ ನಬಿ ಆಜಾದ್ ಆರೋಪಿಸಿದ್ದಾರೆ. ಇದೇ ವೇಳೆ ಕಾಂಗ್ರೆಸ್ ನ ಮತ್ತೋರ್ವ ನಾಯಕ ಆನಂದ್ ಶರ್ಮಾ ಸಹ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಕೇಂದ್ರ ಸರ್ಕಾರ ಕಾಂಗ್ರೆಸ್ ನಾಯಕರನ್ನು ಟಾರ್ಗೆಟ್ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಕಾಂಗ್ರೆಸ್ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ, ರೆಸಾರ್ಟ್ ನಲ್ಲಿದ್ದ ಕಾಂಗ್ರೆಸ್ ಶಾಸಕರ ವಿಚಾರಣೆ ನಡೆಸಿಲ್ಲ, ಡಿಕೆ ಶಿವಕುಮಾರ್ ಅವರನ್ನು ಮಾತ್ರ ವಿಚಾರಣೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics