ಶಿಮ್ಲಾ: ಕಣಿವೆ ನಾಡು ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ ಸಂಭವಿಸಿದ ಕಾರಣ ಇಬ್ಬರು ಬಲಿಯಾಗಿರುವ ಘಟನೆ ಭಾನುವಾರ ನಡೆದಿದೆ.
ಹಿಮಾಚಲ ಪ್ರದೇಶದ ಕುಲ್ಲು ಜಿಲ್ಲೆಯಲ್ಲಿ ಮೇಘಸ್ಫೋಟ ಸಂಭವಿಸಿದ್ದು, ಸತತವಾಗಿ ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಈಗಾಗಲೇ ಸಾವಿರಾರು ಎಕರೆ ಕೃಷಿ ಭೂಮಿ ಹಾಳಾಗಿದ್ದು, ನದಿ ತಪ್ಪಲಿನಲ್ಲಿದ್ದ ಮನೆಗಳು ಹಾಗೂ ಕಟ್ಟಡಗಳು ಕುಸಿದಿವೆ ಎಂದು ತಿಳಿದುಬಂದಿದೆ.
ಕುಲ್ಲು ಜಿಲ್ಲೆಯ ಕುಲ್ಲು ಜಿಲ್ಲೆಯ ಸರ್ಗ ಪಂಚಾಯಿತಿ ವ್ಯಾಪ್ತಿಯ ಥೇದೇರ್ ಗ್ರಾಮದಲ್ಲಿ ಇಬ್ಬರು ಮಕ್ಕಳು ಮಳೆಗೆ ಬಲಿಯಾಗಿದ್ದಾರೆ ಎಂದು ತಿಳಿದುಬಂದಿದೆ, ಅಂತೆಯೇ ನಾಲ್ಕು ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಮೇಘಸ್ಫೋಟದಿಂದಾಗಿ ಸತತ ಮಳೆಯಾಗುತ್ತಿದ್ದು, ಪ್ರವಾಹದಿಂದಾಗಿ ಕುಲ್ಲು ಜಿಲ್ಲೆಯ ಕುಡಿವ ನೀರಿನ ಪಂಪ್ ಗಳಿಗೆ ಹಾನಿಯಾಗಿದೆ. ರಸ್ತೆಗಳು ಕೊಚ್ಚಿಹೋಗಿದ್ದು, ಸಾಕಷ್ಟು ಕಡೆಗಳಲ್ಲಿ ಭೂಕುಸಿತ ಸಂಭವಿಸಿವೆ. ಹಲವು ಮನೆಗಳು ನೆಲಸಮವಾಗಿದ್ದು, ಹತ್ತಾರು ಸಾಕು ಪ್ರಾಣಿಗಳು ನೀರಿನಲ್ಲಿ ಕೊಚ್ಚಿ ಹೋಗಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಮೇಘಸ್ಫೋಟ ಸಂಭವಿಸುತ್ತಿದ್ದಂತೆಯೇ ಸ್ಥಳೀಯ ಜಿಲ್ಲಾಡಳಿತ ಎಚ್ಚರಿಕೆ ನೀಡಿದ್ದು, ರಕ್ಷಣಾ ಕಾರ್ಯಾಚರಣೆಗೆ ಕರೆ ನೀಡಿದೆ. ಹೀಗಾಗಿ ಎನ್ ಡಿಆರ್ ಎಫ್ ಸಿಬ್ಬಂದಿ ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.
ಮುಂದಿನ 24 ಗಂಟೆಗಳ ಕಾಲ ಕುಲ್ಲು ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.