ಚೆನ್ನೈ: ಎಐಎಡಿಎಂಕೆಯಲ್ಲಿನ ಎರಡು ಬಣಗಳು ಮತ್ತೆ ಒಂದಾಗುತ್ತಿವೆ ಎಂಬ ಸುದ್ದಿಯ ಬೆನ್ನಲ್ಲೇ ಪ್ರತಿಪಕ್ಷ ಡಿಎಂಕೆ ತಮಿಳುನಾಡು ಮುಖ್ಯಮಂತ್ರಿ ಇ.ಕೆ.ಪಳನಿಸ್ವಾಮಿ ಅವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವುದಾಗಿ ಹೊಸ ಬಾಂಬ್ ಸಿಡಿಸಿದೆ.
ಡಿಎಂಕೆ ಜಿಲ್ಲಾ ಕಾರ್ಯದರ್ಶಿಗಳೊಂದಿಗೆ ನಡೆದ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿಎಂಕೆ ಕಾರ್ಯಾದ್ಯಕ್ಷ ಎಂ.ಕೆ.ಸ್ಟಾಲಿನ್ ಅವರು, ಅಗತ್ಯ ಬಿದ್ದರೆ ರಾಜ್ಯ ಸರ್ಕಾರದ ವಿರುದ್ಧ ನಾವು ಅವಿಶ್ವಾಸ ನಿರ್ಣಯ ಮಂಡಿಸುತ್ತೇವೆ ಎಂದಿದ್ದಾರೆ.
ನಿನ್ನೆ ತಮಿಳುನಾಡಿನಲ್ಲಿ ನಡೆದ ಮಹತ್ವದ ರಾಜಕೀಯ ಬೆಳವಣಿಗೆಯೊಂದರಲ್ಲಿ ಎಐಎಡಿಎಂಕೆ ಪಕ್ಷದ ಉಪ ಪ್ರಧಾನ ಕಾರ್ಯದರ್ಶಿ ಟಿಟಿವಿ ದಿನಕರನ್ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ ಮತ್ತು ಅಕ್ರಮ ಆಸ್ತಿ ಪ್ರಕರಣದಲ್ಲಿ ಜೈಲು ಪಾಲಾಗಿರುವ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಶಶಿಕಲಾ ಅವರಿಗೂ ಗೇಟ್ ಪಾಸ್ ನೀಡಲು ಸಿದ್ಧತೆ ನಡೆದಿದೆ ಎಂದು ಮಾಧ್ಯಮಗಳು ವರದಿ ಮಾಡಿದ್ದವು.
ಈ ಬಗ್ಗೆ ಪ್ರತಿಕ್ರಿಯಿಸಿದ ಪ್ರತಿಪಕ್ಷದ ನಾಯಕ ಸ್ಟಾಲಿನ್ ಅವರು, ಮುಖ್ಯಮಂತ್ರಿ ಪಳನಿಸ್ವಾಮಿ, ಮಾಜಿ ಮುಖ್ಯಮಂತ್ರಿ ಪನ್ನೀರ್ ಸೇಲ್ವಂ ಹಾಗೂ ಟಿಟಿವಿ ದಿನಕರನ್ ಮೂರು ಬಣಗಳಾಗಿ ವಿಭಜನೆಗೊಂಡಿದ್ದು, ಸರ್ಕಾರದಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ ಎಂದಿದ್ದಾರೆ.