ನವದೆಹಲಿ: ಪ್ರಮುಖ ಬೆಳವಣಿಗೆಯಲ್ಲಿ ಮಾಜಿ ಕೇಂದ್ರ ಸಚಿವ ಲಾಲೂ ಪ್ರಸಾದ್ ಅವರ ಪುತ್ರಿ ಮಿಸಾ ಭಾರ್ತಿ ಹಾಗೂ ಅವರ ಪತಿ ಶೈಲೇಶ್ ಕುಮಾರ್ ಅವರಿಗೆ ಆದಾಯ ತೆರಿಗೆ ಅಧಿಕಾರಿಗಳು ಮತ್ತೊಂದು ಸಮನ್ಸ್ ಜಾರಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಈ ಹಿಂದೆ ಅಕ್ರಮ ಹಣ ವ್ಯವಹಾರಕ್ಕೆ ಸಂಬಂಧಿಸಿದಂತೆ ಆದಾಯ ತೆರಿಗೆ ಅಧಿಕಾರಿಗಳು ಲಾಲೂ ಪುತ್ರಿ ನಿವಾಸ ಹಾಗೂ ಕಚೇರಿಗಳ ಮೇಲೆ ದಾಳಿ ಮಾಡಿ ಮಹತ್ವದ ದಾಖಲೆ ಪತ್ರಗಳನ್ನು ವಶಪಡಿಸಿಕೊಂಡಿದ್ದರು. ಇದೀಗ ಅದೇ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಮತ್ತೆ ಸಮನ್ಸ್ ಜಾರಿ ಮಾಡಿದ್ದಾರೆ. ಮೂಲಗಳ ಪ್ರಕಾರ ಸೋಮವಾರದೊಳಗೆ ವಿಚಾರಣೆಗೆ ಹಾಜರಾಗುವಂತೆ ಅಧಿಕಾರಿಗಳು ಇಬ್ಬರಿಗೂ ಸಮನ್ಸ್ ಜಾರಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಅಂತೆಯೇ ಲಾಲೂ ಪತ್ನಿ ರಾಬ್ಡಿ ದೇವಿ ಹಾಗೂ ಲಾಲೂ ಪುತ್ರ ಹಾಗೂ ಮಾಜಿ ಸಚಿವ ತೇಜಸ್ವಿಯಾದವ್ ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲೂ ಕೂಡ ಅಧಿಕಾರಿಗಳು ಚಿಂತನೆಯಲ್ಲಿ ತೊಡಗಿದ್ದಾರೆ ಎನ್ನಲಾಗಿದೆ. ಪಾಟ್ನಾ ಮತ್ತು ದೆಹಲಿಯಲ್ಲಿ ದುಬಾರಿ ನಿವೇಶನ ಪಡೆಯಲು ಲಾಲೂ ಕುಟುಂಬ ನಕಲಿ ಸಂಸ್ಥೆಗಳನ್ನು ಬಳಸಿಕೊಂಡಿತ್ತು ಎಂಬ ಗಂಭೀರ ಆರೋಪವಿದ್ದು, ಬೇನಾಮಿ ಹೆಸರಲ್ಲಿ ಆಸ್ಚಿ ಖರೀದಿಸಲಾಗಿದೆ ಎಂದು ಹೇಳಲಾಗಿದೆ. ಈ ಹಿನ್ನಲೆಯಲ್ಲಿ ಐಟಿ ಅಧಿಕಾರಿಗಳು ದೆಹಲಿ ಕೋರ್ಟ್ ನಲ್ಲಿ ಲಾಲೂ ಕುಟುಂಬಸ್ಥರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಚಿಂತನೆಯಲ್ಲಿ ತೊಡಗಿದ್ದಾರೆ ಎನ್ನಲಾಗಿದೆ.