ಹರ್ದೊಯ್: ಅಪ್ರಾಪ್ತೆ ಮೇಲೆ ಅತ್ಯಾಚಾರಕ್ಕೆ ಯತ್ನ- ಕಾಮುಕನಿಗೆ ಥಳಿಸಿ, ಚಪ್ಪಲಿ ಹಾರ ಹಾಕಿದ ಗ್ರಾಮಸ್ಥರು
ಹರ್ದೊಯ್ (ಉತ್ತರಪ್ರದೇಶ): ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ ಮಾಡಿದ್ದ ಕಾಮುಕನನ್ನು ಹಿಡಿದ ಸ್ಥಳೀಯರು ಹಿಗ್ಗಾಮುಗ್ಗಾ ಥಳಿಸಿ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿರುವ ಘಟನೆಯೊಂದು ಉತ್ತರಪ್ರದೇಶದ ಹರ್ದೋಯ್ ಜಿಲ್ಲೆಯಲ್ಲಿ ನಡೆದಿದೆ.
ಬಲ್ಭದ್ರಾ ಅಳಿಯಾಸ್ ಮಸ್ತಾನ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ಕಾಮುಕನಾಗಿದ್ದಾನೆ. ಮಗಳು ಮನೆಯ ಹೊರಾಂಗಣದಲ್ಲಿ ಆಟವಾಡುತ್ತಿದ್ದ ವೇಳೆ ಬಲ್ಭದ್ರ ಸ್ಥಳಕ್ಕೆ ಬಂದಿದ್ದಾನೆ. ಈ ವೇಳೆ ಆಕೆಯನ್ನು ಎಳೆದೊಯ್ದು ಅತ್ಯಾಚಾರಕ್ಕೆ ಯತ್ನ ಮಾಡಿದ್ದ. ಬಾಲಕಿಯ ಚೀರಾಟ ಕೇಳಿ ಸ್ಥಳಕ್ಕೆ ಧಾವಿಸಿದ್ದೆವು ಎಂದು ಬಾಲಕಿಯ ತಾಯಿ ಹೇಳಿಕೊಂಡಿದ್ದಾರೆ.
ಘಟನೆ ಬೆಳಕಿಗೆ ಬರುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಊರಿನ ಗ್ರಾಮಸ್ಥರು ಕಾಮುಕನ ತಲೆ ಬೋಳಿಸಿ, ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಬಳಿಕ ಆತನಿಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ್ದಾರೆಂದು ತಿಳಿದುಬಂದಿದೆ.
ಪೊಲೀಸ್ ವರಿಷ್ಠಾಧಿಕಾರಿ ವಿಪಿನ್ ಕುಮಾರ್ ಮುಶ್ರಾ ಮಾತನಾಡಿ, ಮಧ್ಯವಯಸ್ಸಿನ ವ್ಯಕ್ತಿಯೊಬ್ಬ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಲು ಯತ್ನಸಿದ್ದಾನೆ. ಬಳಿಕ ಆತನನ್ನು ಹಿಡಿದಿರುವ ಗ್ರಾಮಸ್ಥರು ಥಳಿಸಿದ್ದಾರೆ. ಪ್ರಸ್ತುತ ಆರೋಪಿಯನ್ನು ಬಂಧನಕ್ಕೊಳಪಡಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಲಾಗುತ್ತಿದೆ ಎಂದಿದ್ದಾರೆ.