ನವದೆಹಲಿ: ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿ.ಜೆ.ಜಯಲಲಿತಾ ಅವರ ಮೂಲ ಹೆಬ್ಬೆಟ್ಟಿನ ಮಾದರಿ ಒದಗಿಸುವಂತೆ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಅಧೀಕ್ಷಕರಿಗೆ ಹಾಗೂ ಭಾರತೀಯ ವಿಶಿಷ್ಟ ಗುರುತು ಪ್ರಾಧಿಕಾರ(ಯುಐಡಿಎಐ)ದ ಪ್ರಾದೇಶಿಕ ಕಚೇರಿಗೆ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಶುಕ್ರವಾರ ಸುಪ್ರೀಂ ಕೋರ್ಟ್ ತಡೆ ನೀಡಿದೆ.
2016ರ ನವೆಂಬರ್ ನಲ್ಲಿ ತಿರುಪ್ಪರಾಂಗುಂದ್ರಮ್ ವಿಧಾನಸಭೆಗೆ ನಡೆದ ಉಪ ಚುನಾವಣೆಯಲ್ಲಿ ಎಐಎಡಿಎಂಕೆ ಅಭ್ಯರ್ಥಿ ಎಕೆ ಬೋಸ್ ಅವರ ಆಯ್ಕೆಯನ್ನು ಪ್ರಶ್ನಿಸಿ ಡಾ.ಸರವಣನ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಮದ್ರಾಸ್ ಹೈಕೋರ್ಟ್, ಡಿಸೆಂಬರ್ 8ರೊಳಗೆ ಜಯಲಲಿತಾ ಅವರ ಮೂಲ ಹೆಬ್ಬೆಟ್ಟಿನ ಗುರುತು ಒದಗಿಸುವಂತೆ ಬೆಂಗಳೂರು ಜೈಲಿಗೆ ಹಾಗೂ ಆಧಾರ್ ಪ್ರಾದೇಶಿಕ ಕಚೇರಿಗೆ ಆದೇಶಿಸಿತ್ತು.
ಹೈಕೋರ್ಟ್ ಆದೇಶ ಪ್ರಶ್ನಿಸಿ ಎಕೆ ಬೋಸ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ತ್ರಿಸದಸ್ಯ ಪೀಠ, ಹೈಕೋರ್ಟ್ ಆದೇಶಕ್ಕೆ ತಡೆ ನೀಡಿ, ಎಂಟು ವಾರಗಳಲ್ಲಿ ಪ್ರತಿಕ್ರಿಯೆ ಸಲ್ಲಿಸುವಂತೆ ಪ್ರತಿವಾದಿ ಅರ್ಜಿದಾರರಿಗೆ ಸೂಚಿಸಿದೆ.
ಉಪ ಚುನಾವಣೆ ವೇಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜಯಲಲಿತಾ ಅವರ ಒಪ್ಪಿಗೆ ಇಲ್ಲದೆಯೇ ಮತ್ತು ಅರಿವಿಗೆ ಬಾರದೇ ಚುನಾವಣಾ ದಾಖಲೆಗಳಿಗೆ ಅವರ ಬೆರಳಚ್ಚನ್ನು ಪಡೆಯಲಾಗಿದೆ ಎಂದು ಸರವಣನ್ ಅವರು ತಮ್ಮ ಅರ್ಜಿಯಲ್ಲಿ ಆರೋಪಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics