ಗೋವಾ ರಾಜ್ಯ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್
ಪಣಜಿ: ಮಹದಾಯಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಮಾತುಕತೆಗೆ ಸಿದ್ಧ ಎಂದು ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದರೂ ರಾಜ್ಯ ಹಿತಾಸಕ್ತಿಯಲ್ಲಿ ಯಾವುದೇ ರಾಜಿ ಮಾಡಿಕೊಂಡಿಲ್ಲ ಎಂದು ಗೋವಾ ರಾಜ್ಯ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರು ಗುರುವಾರ ಹೇಳಿದ್ದಾರೆ.
ಮಹದಾಯಿ ವಿವಾದ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಮಹದಾಯಿ ವಿವಾದ ಕುರಿತಂತೆ ಬಿ.ಎಸ್ ಯಡಿಯೂರಪ್ಪ ಅವರಿಗೆ ನಾನು ಪತ್ರವನ್ನು ಬರೆದಿದ್ದೆ. ರಾಜಕೀಯ ಕ್ಷೇತ್ರದಲ್ಲಿ ನೀವು ಕೆಲವೊಮ್ಮೆ ಕೆಲವು ನಿರ್ಧಾರಗಳನ್ನು ಕೈಗೊಳ್ಳಬೇಕಾಗುತ್ತದೆ. ಆದರೆ, ರಾಜ್ಯ ಹಿತಾಸಕ್ತಿಯೊಂದಿಗೆ ರಾಜಿ ಮಾಡಿಕೊಳ್ಳುವ ಯಾವುದೇ ನಿರ್ಧಾರ ಕೈಗೊಳ್ಳುವುದಿಲ್ಲ. ಮಹದಾಯಿ ನದಿ ವಿವಾದದಲ್ಲಿ ರಾಜ್ಯ ಯಾವುದೇ ಒತ್ತಡಕ್ಕೆ ಒಳಗಾಗುವುದಿಲ್ಲ ಎಂದು ಹೇಳಿದ್ದಾರೆ.
ಇದೇವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಅವರು, ಕರ್ನಾಟಕದಲ್ಲಿ ಪ್ರಸ್ತುತ ಆಡಳಿತದಲ್ಲಿರುವ ಜನರನ್ನು ನಾನು ನಂಬುವಿದಿಲ್ಲ. ಹೀಗಾಗಿ ನಾನು ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದೆ ಎಂದು ತಿಳಿಸಿದ್ದಾರೆ.
ಕರ್ನಾಟಕ ರಾಜ್ಯದಲ್ಲಿ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನಲೆಯಲ್ಲಿ ಯಡಿಯೂರಪ್ಪ ಅವರಿಗೆ ಬರೆದಿರುವ ಪತ್ರವನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿರುವ ಅವರು, ಈರೀತಿ ನೀವು ಚಿಂತನೆ ಮಾಡುತ್ತಿರುವುದೇ ಆದರೆ, ಅವರನ್ನೇ ಹೋಗಿ ಪ್ರಶ್ನಿಸಿ. ಮಹದಾಯಿ ವಿವಾದ ಸಂಬಂಧ ನಾನು ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದೇನೆ. ಆದರೆ, ಗೋವಾ ಹಿತಾಸಕ್ತಿಗೆ ವಿರುದ್ಧವಾಗಿ ಎಂದಿಗೂ ನಡೆಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics