ಚೆನ್ನೈ: ತಮಿಳುನಾಡಿನ ಮಾಜಿ ಸಿಎಂ ಜಯಲಲಿತಾ ಅವರ ಸಾವು ಸಹಜವಲ್ಲ, ಅವರ ಸಾವಿಗೆ ವಿಕೆ ಶಶಿಕಲಾ ನೇರ ಹೊಣೆ ಎಂದು ಎಐಎಡಿಎಂಕೆ ನಾಯಕ ಪಿಹೆಚ್ ಪಾಂಡಿಯನ್ ಬಾಂಬ್ ಸಿಡಿಸಿದ್ದಾರೆ.
ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಪಾಂಡಿಯನ್, ಶಶಿಕಲಾ ಅವರು ನಮಗೆಲ್ಲ ಮೋಸ ಮಾಡಿ ಮುಖ್ಯಮಂತ್ರಿ ಸ್ಥಾನಕ್ಕೇರಲು ಬಯಸಿದ್ದಾರೆ. ಇದನ್ನು ನಾವು ತೀವ್ರವಾಗಿ ವಿರೋಧಿಸುತ್ತೇವೆ ಎಂದು ಹೇಳುವ ಮೂಲಕ ತಮಿಳುನಾಡು ನಿಯೋಜಿತ ಮುಖ್ಯಮಂತ್ರಿ ಶಶಿಕಲಾ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.
ಪನ್ನೀರ್ ಸೆಲ್ವಂ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುವ ಮೂಲಕ ಶಶಿಕಲಾ ತಮಿಳುನಾಡು ಸಿಎಂ ಸ್ಥಾನಕ್ಕೇರಲು ಸಿದ್ಧತೆ ನಡೆಸಿದ್ದಾರೆ. ಆದರೆ ಜಯಲಲಿತಾ ಅವರ ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ವಾರ ಸುಪ್ರೀಂಕೋರ್ಟ್ ತೀರ್ಪು ನೀಡಲಿದ್ದು, ಇದಕ್ಕೆ ತಡೆ ನೀಡುವಂತೆ ಸುಪ್ರೀಂಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.
ನಿನ್ನೆಯಷ್ಟೇ ಜಯಲಲಿತಾಗೆ ಚಿಕಿತ್ಸೆ ನೀಡಿದ್ದ ವೈದ್ಯರ ತಂಡ ದಿಢೀರ್ ಪತ್ರಿಕಾಗೋಷ್ಠಿ ನಡೆಸಿ, ಜಯಲಲಿತಾ ಸಾವು ಅಸಹಜವಲ್ಲ. ಸಂಶಯಕ್ಕೆ ಆಸ್ಪದ ಇಲ್ಲ ಎಂದು ಸ್ಪಷ್ಟಪಡಿಸಿತ್ತು. ಆದರೆ ಇದರ ಬೆನ್ನಲ್ಲೇ ಪಾಂಡಿಯನ್ ಪತ್ರಿಕಾಗೋಷ್ಠಿ ನಡೆಸಿ ಜಯ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.