ನವದೆಹಲಿ: ದೆಹಲಿಯ ಅಂಗಡಿಯೊಂದಕ್ಕೆ ತಗುಲಿದ್ದ ಬೆಂಕಿ ನಂದಿಸುವ ವೇಳೆ ಅಲ್ಲಿದ್ದ ಸಿಲಿಂಡರ್ ವೊಂದು ಸ್ಫೋಟಗೊಂಡ ಪರಿಣಾಮ ಇಬ್ಬರು ಅಗ್ನಿಶಾಮಕ ಸಿಬ್ಬಂದಿ ಸಾವನ್ನಪ್ಪಿರುವ ಭೀಕರ ಘಟನೆ ದೆಹಲಿಯಲ್ಲಿ ನಡೆದಿದೆ.
ದೆಹಲಿಯ ವಿಕಾಸ್ ಪುರಿ ಪ್ರದೇಶದಲ್ಲಿರುವ ತಿಂಡಿತಿನಿಸುಗಳ ಅಂಗಡಿಗೆ ಇಂದು ಬೆಳಗ್ಗೆ ಸುಮಾರು 5.30ರ ಸಂದರ್ಭದಲ್ಲಿ ಬೆಂಕಿ ತಗುಲಿತ್ತು. ಇದನ್ನು ಕಂಡ ಸ್ಥಳೀಯರು ಕೂಡಲೇ ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿ ವಿಚಾರ ಮುಟ್ಟಿಸಿದ್ದಾರೆ. ಸ್ಥಳಕ್ಕೆ ಐದು ಅಗ್ನಿಶಾಮಕ ವಾಹನಗಳು ಹಾಗೂ ಹಲವು ಸಿಬ್ಬಂದಿಗಳು ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯ ನಡೆಸುತ್ತಿದ್ದರು. ಈ ವೇಳೆ ಅಗ್ನಿಶಾಮಕ ಸಿಬ್ಬಂದಿಯಿದ್ದ ಪ್ರದೇಶದಲ್ಲೇ ಇದ್ದ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಇಬ್ಬರು ಅಗ್ನಿ ಶಾಮಕ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡರು.
ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆ ದಾಖಲಿಸಲು ಯತ್ನಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮೃತರನ್ನು ಹರಿ ಸಿಂಗ್ ಮೀಣ ಮತ್ತು ಹರಿ ಓಂ ಗುರುತಿಸಲಾಗಿದ್ದು, ಇತರೆ ಮೂವರು ಸಿಬ್ಬಂದಿಗಳು ಗಾಯಗೊಂಡಿದ್ದಾರೆ. ಪ್ರಸ್ತುತ ಗಾಯಾಳು ಸಿಬ್ಬಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.