ನವದೆಹಲಿ: ಮಹಾರಾಷ್ಟ್ರದ ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶದಲ್ಲಿ ಪಕ್ಷಕ್ಕೆ ತೀವ್ರ ಹಿನ್ನಡೆ ಉಂಟಾಗಿರುವ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳುವುದಾಗಿ ಕಾಂಗ್ರೆಸ್ ತಿಳಿಸಿದೆ.
ಕಾಂಗ್ರೆಸ್ ಪಕ್ಷದ ಕಳಪೆ ಪ್ರದರ್ಶನ ನೀಡಿರುವುದರ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಲಿದ್ದೇವೆ ಎಂದು ಕಾಂಗ್ರೆಸ್ ನ ಮುಖ್ಯ ವಕ್ತಾರ ರಣ್ ದೀಪ್ ಸುರ್ಜೇವಾಲ ಹೇಳಿದ್ದಾರೆ. ಪಕ್ಷದ ಸೋಲಿಗೆ ಕಾರಣವಾಗಿರುವ ಅಂಶಗಳನ್ನು ಪರಿಗಣಿಸಿ ಕಾಂಗ್ರೆಸ್ ನ ಸಂಘಟನೆಯನ್ನು ಬಲಪಡಿಸುತ್ತೇವೆ. ಮುಂಬೈ ನಲ್ಲಿ ಕಾಂಗ್ರೆಸ್ ಸಾರ್ವಜನಿಕರ ಧ್ವನಿಯಾಗಲಿದೆ ಎಂದು ರಣ್ ದೀಪ್ ಸುರ್ಜೇವಾಲ ತಿಳಿಸಿದ್ದಾರೆ.
ಕಾಂಗ್ರೆಸ್ ಪಕ್ಷ ಸೋತಿರುವುದಕ್ಕೆ ಪ್ರತಿಕ್ರಿಯೆ ನೀಡಿರುವ ಪಕ್ಷದ ಹಿರಿಯ ಸದಸ್ಯ ಮಿಳಿಂದ್ ಡಿಯೋರಾ, ಶಿವಸೇನೆ-ಬಿಜೆಪಿಯನ್ನು ಕಟ್ಟಿಹಾಕುವಲ್ಲಿ ಕಾಂಗ್ರೆಸ್ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಅಸಮಾಧಾನ ವ್ಯಕ್ತಪಪಡಿಸಿದ್ದಾರೆ. ಫೆ.23 ರಂದು ಘೋಷಣೆಯಾದ ಮುಂಬೈ ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶದಲ್ಲಿ ಬಿಜೆಪಿ-ಶಿವಸೇನೆ ಮೇಲುಗೈ ಸಾಧಿಸಿದ್ದರೆ ಕಾಂಗ್ರೆಸ್ ಅತ್ಯಂತ ಕಡಿಮೆ ಸ್ಥಾನ ಗಳಿಸಿತ್ತು.