ನೀತಿ ಸಂಹಿತೆ ಉಲ್ಲಂಘನೆ: ಚುನಾವಣಾ ಆಯೋಗದಿಂದ ಸಾಕ್ಷಿ ಮಹಾರಾಜ್'ಗೆ ನೋಟಿಸ್ ಜಾರಿ
ಜನಸಂಖ್ಯಾ ಸ್ಫೋಟ ಕುರಿತಂತೆ ಸಮುದಾಯವೊಂದನ್ನು ಗುರಿಯಾಗಿರಿಸಿಕೊಂಡು ಹೇಳಿಕೆ ನೀಡಿದ್ದ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಅವರಿಗೆ ಚುನಾವಣಾ ಆಯೋಗ ಮಂಗಳವಾರ ನೋಟಿಸ್ ಜಾರಿ ಮಾಡಿದೆ...
ನವದೆಹಲಿ: ಜನಸಂಖ್ಯಾ ಸ್ಫೋಟ ಕುರಿತಂತೆ ಸಮುದಾಯವೊಂದನ್ನು ಗುರಿಯಾಗಿರಿಸಿಕೊಂಡು ಹೇಳಿಕೆ ನೀಡಿದ್ದ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಅವರಿಗೆ ಚುನಾವಣಾ ಆಯೋಗ ಮಂಗಳವಾರ ನೋಟಿಸ್ ಜಾರಿ ಮಾಡಿದೆ.
ದೇಶದಲ್ಲಿ ಜನಸಂಖ್ಯಾ ಸ್ಫೋಟಕ್ಕೆ ಹಿಂದೂಗಳು ಕಾರಣರಲ್ಲ. 4 ಪತ್ನಿಯರು, 40 ಮಕ್ಕಳು ಹಾಗೂ ಮೂರು ವಿಚ್ಛೇದನ ಎಂಬ ಪರಿಕಲ್ಪನೆಯನ್ನು ಪಾಲನೆ ಮಾಡುತ್ತಿರುವವರೇ ಕಾರಣ ಎಂದು ಪರೋಕ್ಷವಾಗಿ ಮುಸ್ಲಿಮರ ವಿರುದ್ಧ ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಸಾಕಷ್ಟು ವಿರೋಧಗಳು ವ್ಯಕ್ತವಾಗಿದ್ದವು. ನಂತರ ಮತ್ತೊಂದು ಹೇಳಿಕೆ ನೀಡಿದ್ದ ಸಾಕ್ಷಿ ಮಹಾರಾಜ್ ಅವರು ನಾಲ್ಕು ಪತ್ನಿಯವರು, 40 ಮಕ್ಕಳು, ಮೂರು ವಿಚ್ಛೇದನ ಪಡೆದಿರುವವರನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಮಕ್ಕಳನ್ನೇ ಹೊಂದಿರದ ನನಗೆ ಸರ್ಕಾರ ಪ್ರಶಸ್ತಿಯನ್ನು ಕೊಡಬೇಕೆಂದು ಹೇಳಿದ್ದರು.
ಕೆಲ ದಿನಗಳ ಹಿಂದಷ್ಟೇ ಸುಪ್ರೀಂಕೋರ್ಟ್ ಮಹತ್ವದ ಆದೇಶವೊಂದನ್ನು ಹೊರಡಿಸಿತ್ತು. ಜಾತಿ ಮತ್ತು ಧರ್ಮದ ಆಧಾರದ ಮೇಲೆ ಮತಯಾಚನೆ ಮಾಡಬಾರದು ಎಂದು ಹೇಳಿತ್ತು.
ಸುಪ್ರೀಂಕೋರ್ಟ್ ಆದೇಶದ ಬಳಿಕವೂ ಸಾಕ್ಷಿ ಮಹಾರಾಜ್ ಅವರು ಈ ರೀತಿಯ ಹೇಳಿಕೆ ನೀಡಿದ್ದು, ಇದು ನೀತಿ ಸಂಹಿತೆ ಉಲ್ಲಂಘನೆ ಮಾಡಿದಂತಾಗಿದೆ ಎಂದು ಹೇಳಿರುವ ಚುನಾವಣಾ ಆಯೋಗ ಹೇಳಿಕೆ ಕುರಿತಂತೆ ನಾಳೆಯೊಳಗಾಗಿ ಸ್ಪಷ್ಟನೆ ನೀಡವಂತೆ ನೋಟಿಸ್ ಜಾರಿ ಮಾಡಿದೆ ಎಂದು ತಿಳಿದುಬಂದಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.