ಪ್ರಧಾನ ಮಂತ್ರಿ ನರೇಂದ್ರ ಮೋದಿ
ನವದೆಹಲಿ: ನಿನ್ನೆ ಪಾಟ್ನಾದಲ್ಲಿ ನಡೆದ ದೋಣಿ ದುರಂತದಲ್ಲಿ ಅಸುನೀಗಿದವರ ಕುಟುಂಬಗಳಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ವಿಪತ್ತು ನಿಧಿಯಿಂದ ತಲಾ 2 ಲಕ್ಷ ರೂಪಾಯಿಗಳ ಪರಿಹಾರವ ನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಗಂಭೀರ ಗಾಯಗೊಂಡವರಿಗೆ ತಲಾ 50,000 ರೂಪಾಯಿ ನೀಡಲಾಗುತ್ತದೆ.
ಬಿಹಾರದ ಪಾಟ್ನಾದಲ್ಲಿ ನಿಟ್ ಘಾಟ್ ಸಮೀಪ ಗಂಗಾ ನದಿಯಲ್ಲಿ ಗಾಳಿಪಟ ಉತ್ಸವ ನಡೆಯುತ್ತಿದ್ದ ವೇಳೆ ಆಕಸ್ಮಿಕವಾಗಿ ದೋಣಿ ಮಗುಚಿ ಬಿದ್ದು ಕನಿಷ್ಠ 21 ಮಂದಿ ಮೃತಪಟ್ಟಿದ್ದಾರೆ.
ಮಕರ ಸಂಕ್ರಾಂತಿ ಪ್ರಯುಕ್ತ ನಡೆದ ಗಾಳಿಪಟ ಉತ್ಸವದಲ್ಲಿ ಪಾಲ್ಗೊಂಡು ಸುಮಾರು 40 ಮಂದಿ ತಮ್ಮೂರಿಗೆ ವಾಪಸಾಗುತ್ತಿದ್ದರು. ಈ ಉತ್ಸವವನ್ನು ಆಯೋಜಿಸಿದ್ದು ರಾಜ್ಯ ಸರ್ಕಾರ,
ಮುಖ್ಯಮಂತ್ರಿ ನಿತೀಶ್ ಕುಮಾರ್, ದೋಣಿ ದುರಂತ ಘಟನೆಯ ತನಿಖೆಗೆ ಆದೇಶ ನೀಡಿದ್ದಾರೆ. ರಾಜ್ಯ ವಿಪತ್ತು ಇಲಾಖೆಯ ಪ್ರಧಾನ ಕಾರ್ಯದರ್ಶಿ ಪ್ರತ್ಯ ಅಮ್ರಿತ್ ಅವರ ನೇತೃತ್ವದಲ್ಲಿ ಮೂವರು ಸದಸ್ಯರ ತನಿಖಾ ತಂಡವನ್ನು ರಚಿಸಲಾಗಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ(ಎನ್ ಡಿಆರ್ಎಫ್) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ(ಎಸ್ ಡಿಆರ್ಎಫ್) ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಯಲ್ಲಿ ನಿರತವಾಗಿದೆ.
ಪರಿಹಾರ ಘೋಷಣೆಗೂ ಮುನ್ನ ಪ್ರಧಾನಿಯವರು ಘಟನೆ ಬಗ್ಗೆ ತೀವ್ರ ಸಂತಾಪ ಸೂಚಿಸಿದ್ದರು.